ರಾಯಚೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಲಿಂಗಸೂಗೂರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ್ ಜಿ. ರಾಠೋಡರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ತಾಲ್ಲೂಕಿನಲ್ಲಿ ನಡೆಯುತ್ತಿರುವ ಸಮೀಕ್ಷಾ ಕಾರ್ಯದ ಪ್ರಗತಿ ಕುಂಠಿತವಾಗುತ್ತಿದೆ ಎಂಬ ಕುರಿತು ತಹಶೀಲ್ದಾರರು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದರು. ದೂರು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ವಿಚಾರಣೆ ನಡೆಸಿ, ಅಧಿಕಾರಿಗಳು ಸಮೀಕ್ಷಾ ಕಾರ್ಯದಲ್ಲಿ ಅಗತ್ಯ ಸಹಕಾರ ನೀಡದಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿ (KCSR) ಅಡಿಯಲ್ಲಿ ಇಲಾಖಾ ವಿಚಾರಣೆಗೆ ಒಳಪಡಿಸುವಂತೆ ಸೂಚನೆ ನೀಡಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಆದೇಶ ಹೊರಡಿಸಲಾಗಿದೆ. ಸಮಾಜ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಮಹತ್ವದ ಸಮೀಕ್ಷೆ ಸರ್ಕಾರದ ಪ್ರಮುಖ ಯೋಜನೆಯ ಭಾಗವಾಗಿದ್ದು, ಇದರ ಪ್ರಗತಿ ತಡೆಯುವುದು ಅಭಿವೃದ್ಧಿಗೆ ತೊಂದರೆ ಉಂಟುಮಾಡುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.