SK Home Ad
Home ನಮ್ಮ ಜಿಲ್ಲೆ ರಾಯಚೂರು ರಾಜ್ಯದಾದ್ಯಂತ 1,300ಕ್ಕೂ ಹೆಚ್ಚು ಕೆಪಿಎಸ್ ಶಾಲೆ ಆರಂಭಕ್ಕೆ ಸಿದ್ಧತೆ

ರಾಜ್ಯದಾದ್ಯಂತ 1,300ಕ್ಕೂ ಹೆಚ್ಚು ಕೆಪಿಎಸ್ ಶಾಲೆ ಆರಂಭಕ್ಕೆ ಸಿದ್ಧತೆ

0
46

ರಾಯಚೂರು: ರಾಜ್ಯಾದ್ಯಂತ 1,300ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಸರ್ಕಾರ ಬದ್ಧವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜತೆಗೆ ಆಂಗ್ಲ ಮಾಧ್ಯಮದಲ್ಲೂ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗುವುದು. ಆದರೆ, ಆಂಗ್ಲ ಮಾಧ್ಯಮ ಕಡ್ಡಾಯವಲ್ಲ. ಪೋಷಕರ ಆಯ್ಕೆಗೆ ಬಿಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಜೂನ್ 1ರಿಂದ ಕೆಪಿಎಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅನುದಾನಿತ ಶಾಲೆಗಳಲ್ಲಿ 5,500ರಿಂದ 6 ಸಾವಿರ ಶಿಕ್ಷಕರ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ. ಪಿಯುಸಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 36 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗಿದೆ ಎಂದರು.

ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಒಬ್ಬ ವಿದ್ಯಾರ್ಥಿ ಇದ್ದರೂ ಆ ಶಾಲೆಯನ್ನು ನಿರ್ವಹಣೆ ಮಾಡಲಾಗುವುದು. ಸರ್ಕಾರಿ ಶಾಲೆಗಳ ಫಲಿತಾಂಶ ಖಾಸಗಿ ಶಾಲೆಗಳಿಗಿಂತ ಶೇ. 0.2ರಷ್ಟು ಹೆಚ್ಚಾಗಿದೆ. ಈ ಬಾರಿ ಶೇ. 100ರಷ್ಟು ಫಲಿತಾಂಶ ಸಾಧಿಸುವ ಗುರಿಯೊಂದಿಗೆ ʻ60 ಪ್ಲಸ್ ಮಿಷನ್’ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ನೀತಿ ವಿಜ್ಞಾನ ಪುಸ್ತಕಗಳನ್ನು ವಿತರಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಕೆಕೆಆರ್‌ಡಿಬಿ ಅನುದಾನ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.