ಶಿವಮೊಗ್ಗ: ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಶಿವಮೊಗ್ಗದ ನಿವಾಸಿ ಕಲೀಂ ಬಂಧಿತ ರೌಡಿಶೀಟರ್. ಈತನ ವಿರುದ್ಧ ಕೊಲೆ ಯತ್ನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇರೆಗೆ ಒಟ್ಟಾರೆ 6 ಪ್ರಕರಣಗಳು ದಾಖಲಾಗಿವೆ. ಆದರೆ ಆರೋಪಿಯು ಯಾವುದೇ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಎಸ್‌ಸಿ ನಂಬರ್ 204/23ರಲ್ಲಿ ಆರೋಪಿ ವಿರುದ್ಧ ಬಂಧನಕ್ಕೆ ವಾರೆಂಟ್ ಜಾರಿಯಾಗಿತ್ತು. ತುಂಗಾ ನಗರ ಠಾಣೆ ಪ್ರೋಸೆಸ್ ಸಿಬ್ಬಂದಿ ಕೃಷ್ಣಮೂರ್ತಿ, ಶಾಮ್ ಕುಮಾರ್, ಪ್ರಶಾಂತ್, ನಾಗಪ್ಪರವರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.






















