ಶಿವಮೊಗ್ಗ: ಪಕ್ಷಕ್ಕೆ ವಾಪಸ್ ಬರುತ್ತೇನೆ ಎಂದು ಪಕ್ಷಕ್ಕೆ ಡ್ಯಾಮೇಜ್ ಮಾಡುವ ಹೇಳಿಕೆ ನೀಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನವರು, ತಾವು ನೀಡಿದ ಹೇಳಿಕೆಯನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಹಿಂದೆ 17 ಜನ ಶಾಸಕರನ್ನು ಬಿಜೆಪಿಯಲ್ಲಿ ಖರೀದಿ ಮಾಡಲಾಗಿತ್ತು ಎಂಬ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಿಂದ ಹೊರಹೋದ ಮೇಲೆ ಪಕ್ಷಕ್ಕೆ ಡ್ಯಾಮೇಜ್ ಮಾಡುವುದು ಸರಿಯಲ್ಲ. ಎಷ್ಟು ಹಣ ನೀಡಿದ್ದಾರೆ ಎಂಬುದನ್ನು ಅವರೇ ಬಹಿರಂಗಪಡಿಸಬೇಕು. ಮತ್ತೆ ನಮ್ಮ ಪಕ್ಷಕ್ಕೆ ಬಂದರೆ ಖುಷಿ ಪಡುವವರು ನಾವೇ ಎಂದರು.
ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದ ಕುರಿತು ಈಗಾಗಲೇ ಒಂದು ಸಮಿತಿ ರಚನೆ ಮಾಡಲಾಗಿದೆ. ಶಿವಮೊಗ್ಗದಲ್ಲಿಯೇ ಇಬ್ಬರು ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂಬ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಅವರ ಅಂತೆ, ಕಂತೆಯ ಹೇಳಿಕೆಗೆ ಉತ್ತರ ಕೊಡುವುದಿಲ್ಲ ಎಂದ ಅವರು, ಶಿಸ್ತಿನ ಪಕ್ಷದಲ್ಲಿ ಅಶಿಸ್ತು ಸಹಿಸುವುದಿಲ್ಲ ಎಂದರು.
ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.






















