Home Advertisement
Home ನಮ್ಮ ಜಿಲ್ಲೆ ಶಿವಮೊಗ್ಗ KPS ಶಿಕ್ಷಣ ದೇಶಕ್ಕೇ ಮಾದರಿ : 52 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಚಾಲನೆ

KPS ಶಿಕ್ಷಣ ದೇಶಕ್ಕೇ ಮಾದರಿ : 52 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಚಾಲನೆ

0
47

ರಾಜ್ಯದಲ್ಲಿ ₹3.5 ಕೋಟಿ ವೆಚ್ಚದ 1,000 ಕೆಪಿಎಸ್ ಶಾಲೆಗಳಿಗೆ ಜೂನ್ 1ರಂದು ಶಂಕುಸ್ಥಾಪನೆ : ತೆಲಂಗಾಣಕ್ಕೂ ಮಾದರಿಯಾದ KPS

ಶಿವಮೊಗ್ಗ: ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಜೂನ್ 1ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶುಕ್ರವಾರ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದರು.

ತಲಾ ₹3.5 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆಗಳು : ರಾಜ್ಯದಲ್ಲಿ ನಿರ್ಮಾಣಗೊಳ್ಳಲಿರುವ 1,000 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ತಲಾ ಸುಮಾರು ₹3.5 ಕೋಟಿ ವೆಚ್ಚ ಮಾಡಲಾಗುತ್ತಿದೆ. ಈ ಶಾಲೆಗಳಲ್ಲಿ ಒಂದೇ ಸೂರಿನಡಿ ಅತ್ಯಾಧುನಿಕ ಶಿಕ್ಷಣ ಸೌಲಭ್ಯಗಳು, ಗುಣಮಟ್ಟದ ತರಗತಿಗಳು ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ: ಕರ್ನಾಟಕ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

“ಕೆಪಿಎಸ್ ಈಗ ಶಿಕ್ಷಣ ಕ್ಷೇತ್ರದಲ್ಲಿ ಬ್ರಾಂಡ್ ಆಗಿದ್ದು, ಮಕ್ಕಳ ಭವಿಷ್ಯದ ಆಶಾಕಿರಣವಾಗಿದೆ. ಈ ಮಾದರಿಯನ್ನು ದೇಶದ ಇತರ ರಾಜ್ಯಗಳೂ ಅನುಸರಿಸಲು ಮುಂದಾಗಿವೆ” ಎಂದು ಹೇಳಿದರು.

ತೆಲಂಗಾಣಕ್ಕೂ ಮಾದರಿಯಾದ KPS : ಕರ್ನಾಟಕ ಪಬ್ಲಿಕ್ ಶಾಲೆಗಳ ಪರಿಕಲ್ಪನೆಗೆ ಇತರ ರಾಜ್ಯಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು. ತೆಲಂಗಾಣ ಸರ್ಕಾರ ಇದೇ ಮಾದರಿಯನ್ನು ಅನುಸರಿಸಿ TPS ಆರಂಭಿಸಲು ಮುಂದಾಗಿದ್ದು, ಆ ರಾಜ್ಯದ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಬಂದು ಕೆಪಿಎಸ್ ಯೋಜನೆ ಕುರಿತು ಅಧ್ಯಯನ ನಡೆಸಿದ್ದಾರೆ ಎಂದರು.

ಶಿವಮೊಗ್ಗದಲ್ಲಿ 19 ಕೆಪಿಎಸ್ ಶಾಲೆಗಳ ಉನ್ನತೀಕರಣ : ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 12 ಕೆಪಿಎಸ್ ಶಾಲೆಗಳಿದ್ದು, ಹೊಸದಾಗಿ 19 ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲಾಗುತ್ತಿದೆ. ಜೂನ್ 1ರಂದು ಏಳು ಶಾಲೆಗಳ ಶಂಕುಸ್ಥಾಪನೆ ನಡೆಯಲಿದ್ದು, ಉಳಿದ ಶಾಲೆಗಳ ಡಿಪಿಆರ್ ಪೂರ್ಣಗೊಂಡ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ರಾಜ್ಯದ 1,000 ಕೆಪಿಎಸ್ ಶಾಲೆಗಳ ಪೈಕಿ 800 ಶಾಲೆಗಳನ್ನು ಶಿಕ್ಷಣ ಇಲಾಖೆ ಹಾಗೂ 200 ಶಾಲೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ನಾಯಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆ

52 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ : ಹೊಸ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನವೇ 52 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಅಧಿಕಾರ ವಹಿಸಿಕೊಂಡ ತಕ್ಷಣ ಶಿಕ್ಷಣ ಇಲಾಖೆಯಲ್ಲಿದ್ದ ಹಲವು ನ್ಯೂನತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.

ಶಿಕ್ಷಣದ ಗುಣಮಟ್ಟ ಹೆಚ್ಚಳ : ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ ಎಂದು ಹೇಳಿದ ಸಚಿವರು, ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವವರ ಪ್ರಮಾಣ ಶೇ.6.4ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಪಿಯುಸಿ ಪರೀಕ್ಷೆ-2ರಲ್ಲಿ ಶೇ.45 ಫಲಿತಾಂಶ ದಾಖಲಾಗಿದ್ದು, ಒಟ್ಟಾರೆ ಪಿಯುಸಿ ಫಲಿತಾಂಶ ಈಗ ಶೇ.92.25ಕ್ಕೆ ಏರಿಕೆಯಾಗಿದೆ ಎಂದರು. ಜೊತೆಗೆ ಶೇ.60ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರಮಾಣ ಶೇ.62ರಿಂದ ಶೇ.66.5ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ನೀಟ್ ಅಕ್ರಮ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ : ಈ ವೇಳೆ NEET-UG ಪರೀಕ್ಷೆ ಅಕ್ರಮ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ಅದರ ನೈತಿಕ ಹೊಣೆ ಪ್ರಧಾನಿ ನರೇಂದ್ರ ಮೋದಿ ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಪರೀಕ್ಷಾ ಅಕ್ರಮದಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಕೆಲವರು ಜೀವ ಕಳೆದುಕೊಂಡಿರುವುದು ದುಃಖಕರ ಬೆಳವಣಿಗೆ ಎಂದು ಹೇಳಿದರು.

ಇದನ್ನೂ ಓದಿ: ಶಿಕ್ಷಣ ಸಚಿವರ ರಾಜೀನಾಮೆ ಒತ್ತಾಯಿಸಿ ‘ಕಾಕ್ರೋಚ್’ Digital ಚಳವಳಿ

ವಿದ್ಯಾರ್ಥಿಗಳಿಗೆ ಸನ್ಮಾನ : ಎಸ್ಸೆಸ್ಸೆಲ್ಸಿಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ಜಿಲ್ಲೆಯ 867 ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದರು. ಕಾರ್ಯಕ್ರಮದ ದಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ವಿದ್ಯಾರ್ಥಿಗಳೊಂದಿಗೆ ಊಟ ಮಾಡುವ ವಿಶೇಷ ಕಾರ್ಯಕ್ರಮವೂ ಆಯೋಜಿಸಲಾಗಿದೆ ಎಂದರು.

ರೈತರಿಗೆ ವಿಶೇಷ ಪ್ಯಾಕೇಜ್ ಬೇಡಿಕೆ : ಇತ್ತೀಚಿನ ಬಿರುಗಾಳಿ ಮತ್ತು ಮಳೆಯಿಂದ ಹೊಳೆಹೊನ್ನೂರು ಸೇರಿದಂತೆ ಹಲವು ಭಾಗಗಳಲ್ಲಿ ಅಡಿಕೆ ಬೆಳೆ ಹಾನಿಗೀಡಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.