ಉಡುಪಿ: ಬೈಂದೂರಿನ ಮಾಜಿ ಶಾಸಕ, ಹಿರಿಯ ಸಮಾಜ ಸೇವಕ ಹಾಗೂ ಧಾರ್ಮಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ (91) ಅವರು ಫೆಬ್ರವರಿ 7ರಂದು ಶನಿವಾರ ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು.
1935ರ ಡಿಸೆಂಬರ್ 24ರಂದು ಜನಿಸಿದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ತಮ್ಮ ಜೀವನದ ಬಹುಪಾಲು ಸಮಯವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿದ್ದರು. 1960ರಿಂದ 1983ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವರು, ತಾಲೂಕು ಅಭಿವೃದ್ಧಿ ಬೋರ್ಡಿನ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.
ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ಜನತಾದಳ ಪಕ್ಷದಿಂದ ಸ್ಪರ್ಧಿಸಿ, 1983ರಿಂದ 1994ರವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಶಾಸಕರಾಗಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಶಿಕ್ಷಣ, ರಸ್ತೆ, ನೀರು ಸರಬರಾಜು, ಆರೋಗ್ಯ ಸೇರಿದಂತೆ ಹಲವು ಮೂಲಸೌಕರ್ಯ ಯೋಜನೆಗಳಿಗೆ ವಿಶೇಷ ಒತ್ತು ನೀಡಿದ್ದರು.
ಸಾಮಾಜಿಕ ಸೇವೆಯಲ್ಲಿಯೂ ಅಪಾರ ಆಸಕ್ತಿ ಹೊಂದಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು, ತಾಲೂಕು ಕೋ-ಆಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಧಾರ್ಮಿಕ ಕ್ಷೇತ್ರದಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದರು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಧಾರ್ಮಿಕ ಚಟುವಟಿಕೆಗಳ ಅಭಿವೃದ್ಧಿಗೆ ಶ್ರಮಿಸಿದ್ದರು.
ಕಲೆ ಮತ್ತು ಸಂಸ್ಕೃತಿಗೆ ಸಹಕಾರಿಯಾಗಿದ್ದ ಅವರು ನಾಟಕ ಮತ್ತು ಯಕ್ಷಗಾನ ಕಲಾಪೋಷಕರಾಗಿಯೂ ಗುರುತಿಸಿಕೊಂಡಿದ್ದರು. ಸ್ಥಳೀಯ ಕಲಾವಿದರಿಗೆ ವೇದಿಕೆ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ವಿವಿಧ ರಾಜಕೀಯ ನಾಯಕರು, ಸಮಾಜ ಸೇವಕರು, ಧಾರ್ಮಿಕ ಮುಖಂಡರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.
ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ಬೈಂದೂರು ಕ್ಷೇತ್ರವು ಒಬ್ಬ ನಿಷ್ಠಾವಂತ ನಾಯಕನನ್ನು ಕಳೆದುಕೊಂಡಂತಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.























