NH-66ರಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತ: ಕೆಲಕಾಲ ಸಂಚಾರ ಅಸ್ತವ್ಯಸ್ತ
ಕಟಪಾಡಿ (ಉಡುಪಿ ಜಿಲ್ಲೆ): ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಸಮೀಪ ಸೋಮವಾರ (ಮಾ.16) ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಗೆ ಅಡ್ಡವಾಗಿ ಮಗುಚಿಬಿದ್ದ ಘಟನೆ ನಡೆದಿದೆ. ಈ ಘಟನೆ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತು.
ಮಾಹಿತಿಯ ಪ್ರಕಾರ, ಟ್ಯಾಂಕರ್ ಸಾಗುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ಕಾರೊಂದಕ್ಕೆ ಡಿಕ್ಕಿ ಹೊಡೆದು ಬಳಿಕ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗುವ ಸಾಧ್ಯತೆಯಿದ್ದರಿಂದ ಸ್ಥಳೀಯರಲ್ಲಿ ಆತಂಕ ಮೂಡಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಟ್ಯಾಂಕರ್ ಸಮೀಪ ಜನರು ಹೋಗದಂತೆ ಎಚ್ಚರಿಕೆ ನೀಡಿದರು. ಅಲ್ಲದೆ ಮೊಬೈಲ್ ಫೋನ್ ಬಳಸಿ ಫೋಟೋ ಅಥವಾ ವಿಡಿಯೋ ತೆಗೆದುಕೊಳ್ಳಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನ ಸ್ಥಿತಿಯನ್ನು ಪರಿಶೀಲಿಸಿದರು. ಅನಿಲ ಸೋರಿಕೆ ಸಂಭವಿಸಿರುವುದೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಯಾವುದೇ ಅಪಾಯ ಸಂಭವಿಸದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಹಲವಾರು ವಾಹನಗಳು ಸಾಲುಗಟ್ಟಿ ನಿಂತವು.
ಸ್ಥಳಕ್ಕೆ ಕಾಪು ಪೊಲೀಸ್ ಠಾಣೆ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಸಂಚಾರ ನಿಯಂತ್ರಣ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ವಾಹನ ಸಂಚಾರವನ್ನು ಹಂತ ಹಂತವಾಗಿ ಪುನಃ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.























