SK Home Ad
Home ನಮ್ಮ ಜಿಲ್ಲೆ ಉಡುಪಿ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಗೆ ಗುಂಡಿಕ್ಕಿ ಬರ್ಬರ ಹತ್ಯೆ

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಗೆ ಗುಂಡಿಕ್ಕಿ ಬರ್ಬರ ಹತ್ಯೆ

0
86

ಉಡುಪಿ: ಜಿಲ್ಲೆಯ ಕುಂದಾಪುರ ಪಟ್ಟಣದ ಚರ್ಚ್ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮೃತರನ್ನು ಐವನ್ ರಿಚಾರ್ಡ್ ಮಸ್ಕರೇಂಞಸ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಅವರನ್ನು ಗುರಿಯಾಗಿಸಿಕೊಂಡು ಪಿಸ್ತೂಲ್‌ನಿಂದ ಗುಂಡು ಹಾರಿಸಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಸಮೀಪವೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸ್ಥಳದಲ್ಲಿದ್ದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿರುವ ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈಯಕ್ತಿಕ ದ್ವೇಷ, ವ್ಯವಹಾರ ಸಂಬಂಧಿತ ವೈಮನಸ್ಸು ಅಥವಾ ಇತರ ಯಾವುದೇ ಕಾರಣಗಳ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಎಲ್ಲಾ ಆಯಾಮಗಳಿಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಕುಂದಾಪುರ ನಗರದಲ್ಲಿ ಸಂಚಲನ ಮೂಡಿಸಿದ್ದು, ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದು, ತನಿಖೆ ಮುಂದುವರಿದಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವ ನಿರೀಕ್ಷೆಯಿದೆ.