SK Home Ad
Home ನಮ್ಮ ಜಿಲ್ಲೆ ಉಡುಪಿ ಶೂಟೌಟ್ ಪ್ರಕರಣ: 24 ಗಂಟೆಯೊಳಗೆ ಪ್ರಮುಖ ಆರೋಪಿಗಳ ಬಂಧನ

ಶೂಟೌಟ್ ಪ್ರಕರಣ: 24 ಗಂಟೆಯೊಳಗೆ ಪ್ರಮುಖ ಆರೋಪಿಗಳ ಬಂಧನ

0
3

ಉಡುಪಿ ಕಾಪು ಮುದರಂಗಡಿ ಡೇವಿಡ್ ಡಿ’ಸೋಜಾ ಶೂಟೌಟ್ ಪ್ರಕರಣದಲ್ಲಿ 24 ಗಂಟೆಯೊಳಗೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಪಿಎಸ್ಐ ಮೇಲೆ ಗುಂಡಿನ ದಾಳಿ ನಡೆದಿದ್ದು, ಪ್ರತಿದಾಳಿಯಲ್ಲಿ ಆರೋಪಿ ಗಾಯಗೊಂಡಿದ್ದಾನೆ.

ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಶುಕ್ರವಾರ ನಡೆದ ಗುತ್ತಿಗೆದಾರ ಡೇವಿಡ್ ಡಿ’ಸೋಜಾ ಶೂಟೌಟ್ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 24 ಗಂಟೆಯೊಳಗೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆದಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ.

ಕಚೇರಿಯಿಂದ ವಾಪಸಾಗುತ್ತಿದ್ದಾಗ ಗುಂಡಿನ ದಾಳಿ : ಡೇವಿಡ್ ಡಿ’ಸೋಜಾ ಅವರು ತಮ್ಮ ಪ್ರಿನ್ಸ್ ಎಂಟರ್‌ಪ್ರೈಸಸ್ ಕಚೇರಿಯಿಂದ ವಾಪಸ್ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದಿದ್ದ ಅಪರಿಚಿತರ ತಂಡ ಅವರ ಮೇಲೆ ದಾಳಿ ನಡೆಸಿತ್ತು. ಆರೋಪಿಗಳ ಪೈಕಿ ಒಬ್ಬಾತ ಪಿಸ್ತೂಲ್‌ನಿಂದ ಡೇವಿಡ್ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆಗೆ ಪ್ರಮುಖ ಸುಳಿವಾಗಿ ಪರಿಣಮಿಸಿತ್ತು.

ಬಸ್‌ನಲ್ಲಿ ಭಟ್ಕಳದತ್ತ ಪರಾರಿ : ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್‌ನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತು. ಮಾಹಿತಿ ಆಧರಿಸಿ ಪೊಲೀಸರು ಬೈಂದೂರಿನ ಒತ್ತಿನಾಣೆ ಬಳಿ ಬಸ್‌ನ್ನು ತಡೆದು ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಬಸ್‌ನಲ್ಲಿದ್ದ ಮೂವರು ಆರೋಪಿಗಳು ಪೊಲೀಸರನ್ನು ಕಂಡು ಬಸ್‌ನಿಂದ ಇಳಿದು ಪರಾರಿಯಾಗಲು ಯತ್ನಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ಬೆನ್ನಟ್ಟಿದ ಸಂದರ್ಭದಲ್ಲಿ ಉತ್ತರ ಪ್ರದೇಶದ ಥಾಣಾ ಫಿಲ್ವದ ರಾಜು (42) ಎಂಬ ಆರೋಪಿ ಕಾಪು ಪೊಲೀಸ್ ಠಾಣೆಯ ಪಿಎಸ್ಐ ತೇಜಸ್ವಿ ಅವರನ್ನು ದೂಡಿ, ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ಪೊಲೀಸರತ್ತ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮರಕ್ಷಣೆಗಾಗಿ ಪೊಲೀಸರಿಂದ ಗುಂಡಿನ ದಾಳಿ : ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ರಾಜು ವಿರುದ್ಧ ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ರಾಜುವಿನ ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜುವಿನ ಬಳಿಯಿದ್ದ ಪಿಸ್ತೂಲ್‌ನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡೇವಿಡ್ ಡಿ’ಸೋಜಾ ಅವರಿಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ ಪ್ರಮುಖ ಆರೋಪಿಗಳಲ್ಲಿ ರಾಜು ಕೂಡ ಒಬ್ಬ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ರಾಜು ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಕೂಡ ದಾಖಲಿಸಲಾಗಿದೆ.

ಕುಮಟಾ, ಭಟ್ಕಳದಲ್ಲಿ ಇಬ್ಬರು ಆರೋಪಿಗಳ ಬಂಧನ : ಪರಾರಿಯಾಗಿದ್ದ ಇನ್ನಿಬ್ಬರು ಆರೋಪಿಗಳನ್ನೂ ಪೊಲೀಸರು ಬೆನ್ನಟ್ಟಿ ಬಂಧಿಸಿದ್ದಾರೆ. ಉತ್ತರಾಖಂಡ ಮೂಲದ ಅಜಯ್ ರಸ್ತೋಗಿ ಅಲಿಯಾಸ್ ಅನ್ಮೋಲ್ (23)ನನ್ನು ಕುಮಟಾದಲ್ಲಿ ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಬಿಹಾರ ಮೂಲದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38)ನನ್ನು ಭಟ್ಕಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಮೂಲಕ ಡೇವಿಡ್ ಡಿ’ಸೋಜಾ ಹತ್ಯೆ ಪ್ರಕರಣದಲ್ಲಿ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಪ್ರಮುಖ ಆರೋಪಿಗಳು ಪೊಲೀಸರ ವಶಕ್ಕೆ ಬಂದಿದ್ದಾರೆ.

ಪಿಎಸ್ಐ ತೇಜಸ್ವಿಗೆ ಗಾಯ : ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಆರೋಪಿಯ ಗುಂಡಿನ ದಾಳಿಯಿಂದ ಗಾಯಗೊಂಡಿರುವ ಕಾಪು ಪೊಲೀಸ್ ಠಾಣೆಯ ಪಿಎಸ್ಐ ತೇಜಸ್ವಿ ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡೇಟಿಗೆ ಒಳಗಾದ ಆರೋಪಿ ರಾಜು ಕೂಡ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ : ಡೇವಿಡ್ ಡಿ’ಸೋಜಾ ಅವರ ಮೇಲೆ ದಾಳಿ ನಡೆಸಲು ಆರೋಪಿಗಳು ಬಳಸಿದ್ದ ಮೋಟಾರ್ ಬೈಕ್‌ನ್ನು ಎರ್ಮಾಳ್‌ನಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಸಿಟಿವಿ ದೃಶ್ಯಾವಳಿ, ಆರೋಪಿಗಳ ಚಲನವಲನ ಹಾಗೂ ತಾಂತ್ರಿಕ ಮಾಹಿತಿಯನ್ನು ಆಧರಿಸಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಸುಪಾರಿ ಹತ್ಯೆಯ ಶಂಕೆ : ಡೇವಿಡ್ ಡಿ’ಸೋಜಾ ಅವರು ನಡೆಸುತ್ತಿದ್ದ ಕಾಮಗಾರಿಗೆ ಸಂಬಂಧಿಸಿದಂತೆ ಅನ್ಯರಾಜ್ಯದ ಕಂಪನಿಯೊಂದಿಗಿನ ಹಣಕಾಸಿನ ವಿಚಾರದಲ್ಲಿ ಉಂಟಾದ ವೈಮನಸ್ಸೇ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಡೇವಿಡ್ ಅವರ ಹತ್ಯೆಗೆ ಸುಪಾರಿ ನೀಡಿರುವ ಸಾಧ್ಯತೆಯ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕೃತ್ಯಕ್ಕೆ ಸಹಕರಿಸಿದವರು, ಆರೋಪಿಗಳಿಗೆ ಹಣಕಾಸಿನ ನೆರವು ನೀಡಿದವರು ಹಾಗೂ ಅವರಿಗೆ ಆಶ್ರಯ ನೀಡಿದವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಹಲವು ತಂಡಗಳಿಂದ ಕಾರ್ಯಾಚರಣೆ : ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕಾಪು ವೃತ್ತ ನಿರೀಕ್ಷಕ ಅಝ್ಮತ್ ಆಲಿ ಜಿ., ಡಿಎಸ್‌ಬಿ ವಿಭಾಗದ ಪಿಐ ಹರೀಶ್, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್, ಕುಂದಾಪುರ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಭಟ್ಕಳ ಮತ್ತು ಕುಮಟಾ ಪೊಲೀಸರು, ಜಿಲ್ಲಾ ಅಪರಾಧ ಪರಿಶೀಲನಾಧಿಕಾರಿ, ಬೆರಳಚ್ಚು ತಜ್ಞರು, ಶ್ವಾನದಳ ಹಾಗೂ ಸಿಡಿಆರ್ ಸೆಲ್ ಸೇರಿದಂತೆ ವಿವಿಧ ಘಟಕಗಳು ತನಿಖೆಯಲ್ಲಿ ಸಹಕರಿಸಿವೆ.

ಘಟನೆ ನಡೆದ 24 ಗಂಟೆಯೊಳಗೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಉಡುಪಿ ಜಿಲ್ಲಾ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಪ್ರಕರಣದ ಹಿಂದೆ ಇರುವ ಸಂಪೂರ್ಣ ಜಾಲ, ಸುಪಾರಿ ನೀಡಿದವರು ಹಾಗೂ ಆರ್ಥಿಕ ವ್ಯವಹಾರದ ಹಿನ್ನೆಲೆಯನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.