ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಮಂಗಳೂರು ಮೂಲದ ರೌಡಿಗಳು ಜೈಲರ್ ಹಾಗೂ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ವರದಿಯಾಗಿದೆ.
ಘಟನೆಯಲ್ಲಿ ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಕರ್ತವ್ಯನಿರತ ಇತರ ಮೂವರು ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಜೈಲಿನಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಿ, ತಪಾಸಣೆ ಬಿಗಿ ಮಾಡಿದ ಕ್ರಮವನ್ನು ಸಹಿಸದ ಆರೋಪಿಗಳು, ಸಿಬ್ಬಂದಿಯೊಂದಿಗೆ ತಗಾದೆ ತೆಗೆದಿದ್ದಾರೆ. ಮಾತುಕತೆ ವಿಕೋಪಕ್ಕೆ ಹೋಗಿ, ಜೈಲರ್ ಹಾಗೂ ಸಿಬ್ಬಂದಿ ಬಟ್ಟೆ ಹರಿದು ಮನಬಂದಂತೆ ಥಳಿಸಿದ್ದಾರೆ.
ಹಲ್ಲೆ ನಡೆಸಿದ ಆರೋಪಿಗಳನ್ನು ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ್ ನಿಹಾಲ್ ಎಂದು ಗುರುತಿಸಲಾಗಿದೆ. ಇವರು ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಮಂಗಳೂರು ಜೈಲಿನಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಇವರನ್ನು ಕಾರವಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಕಳೆದ ಕೆಲ ದಿನಗಳಿಂದ ಜೈಲಿನಲ್ಲಿ ಶಿಸ್ತು ಕ್ರಮಗಳನ್ನು ಬಿಗಿಗೊಳಿಸಲಾಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ರೌಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಜೈಲರ್ ಹಾಗೂ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
