ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಗ್ರಾಮದ ಬಳಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಗೋಪಾಲಕೃಷ್ಣ ನಾಯಕ ಅವರನ್ನು ಕೆಲವು ಅಪರಿಚಿತರು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ಅವರು ತಕ್ಷಣ ಸಮೀಪದಲ್ಲಿದ್ದ ಬ್ಯಾಂಕ್‌ಗೆ ಒಳನುಗ್ಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ದುಷ್ಕರ್ಮಿಗಳು ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಅವರ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಗೊಂಡ ಅವರನ್ನು ತಕ್ಷಣ ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹೊನ್ನಾವರಕ್ಕೆ ರವಾನಿಸಲಾಗಿದೆ. ವೈದ್ಯರು ಸ್ಕ್ಯಾನಿಂಗ್ ನಡೆಸಿ ಚಿಕಿತ್ಸೆ ಮುಂದುವರಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಇದೇ ವೇಳೆ ಮಾಜಾಳಿ ಚೆಕ್ ಪೋಸ್ಟ್ ಬಳಿ ನಾಲ್ವರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ. ವಶಕ್ಕೆ ಪಡೆದವರು ಬಿಹಾರ ಮೂಲದವರಾಗಿದ್ದು, ದಾಳಿ ಸುಫಾರಿ ಆಧಾರಿತವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆ ಮುಂದುವರಿದಿದ್ದು, ದಾಳಿಯ ಹಿಂದೆ ಇರುವ ಸೂತ್ರಧಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ಘಟನೆ ಅಂಕೋಲಾ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.




















