SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಭಟ್ಕಳ ಈಗ ಬೂದಿ ಮುಚ್ಚಿದ ಕೆಂಡ

ಭಟ್ಕಳ ಈಗ ಬೂದಿ ಮುಚ್ಚಿದ ಕೆಂಡ

0
23

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಅತಿಸೂಕ್ಷ್ಮ ಪ್ರದೇಶ. ಎರಡು ಗುಂಪುಗಳ ನಡುವಣ ಗಲಾಟೆಯ ಹಿನ್ನೆಲೆಯಲ್ಲಿ ಭಟ್ಕಳ ಈಗ ಬೂದಿ ಮುಚ್ಚಿದ ಕೆಂಡದಂತೆ ಕಾಣುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಯಲ್ಲಿದೆಯಲ್ಲದೆ ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ. ಬಕ್ರೀದ್ ಹಬ್ಬವೂ ಇರುವ ಕಾರಣ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಹಿರಿಯ ಪೊಲೀಸ್ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-66ರ ಅಭಿವೃದ್ಧಿ ವೇಳೆ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಪವಿತ್ರ ಮುರಿನಕಟ್ಟೆ ಪುನರ್ ನಿರ್ಮಾಣಕ್ಕೆ ಸಂಬಂಧಿಸಿ ಉಂಟಾಗಿರುವ ಗಲಭೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಕಠಿಣ ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಕಾರಣದಿಂದಾಗಿ ಮುರಿನ ಕಟ್ಟೆಯನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ಸ್ಥಳೀಯರ ಮನವಿಯಂತೆ, ಎನ್‌ಎಚ್‌ಎಐ ವತಿಯಿಂದ ಮೇ 24ರಂದು ಪರ್ಯಾಯ ಸರ್ಕಾರಿ ಜಮೀನಿನಲ್ಲಿ ಹೊಸ ಕಟ್ಟೆಯನ್ನು ನಿರ್ಮಿಸಲಾಗುತ್ತಿತ್ತು. ಈ ಮಧ್ಯೆ ಒಂದು ಗುಂಪು ಹೊಸ ಕಟ್ಟೆಯನ್ನು ಧ್ವಂಸಗೊಳಿಸಿದ್ದಲ್ಲದೆ, ತಡೆಯಲು ಬಂದ ಪೊಲೀಸರ ಮೇಲೆ ಸಹ ಹಲ್ಲೆ ನಡೆಸಿತ್ತು. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.

ಮುಂದಿನ 48 ಗಂಟೆಯೊಳಗೆ ಜಿಲ್ಲಾಡಳಿತವೇ ಕಟ್ಟೆಯನ್ನು ಮರುನಿರ್ಮಾಣ ಮಾಡಿಕೊಡಬೇಕು, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ವಿಹಿಂಪ ಅಧ್ಯಕ್ಷ ರಾಮಕೃಷ್ಣ ನಾಯ್ಕ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.