ದಾಂಡೇಲಿ (ಉತ್ತರ ಕನ್ನಡ) ಸಂ. ಕ. ಸಮಾಚಾರ : ದಾಂಡೇಲಿ ಪಟ್ಟಣ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ 18 ವರ್ಷದ ಯುವತಿಗೆ ವಾಟ್ಸ್ಆಪ್ ಮೂಲಕ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.
ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 8ರಂದು ರಾತ್ರಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ದಾಂಡೇಲಿ ಪಟ್ಟಣ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.
ಇದನ್ನೂ ಓದಿ: ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು!
ದೂರುದಾರೆಯ ಹೇಳಿಕೆಯ ಪ್ರಕಾರ, ಜುಲೈ 4ರಂದು ಅಪಘಾತಕ್ಕೊಳಗಾದ ತನ್ನ ಸ್ನೇಹಿತನನ್ನು ಭೇಟಿ ಮಾಡಲು ಹಾಗೂ ಆತನ ಮೊಬೈಲ್ ಫೋನ್ ಪಡೆಯಲು ಸ್ನೇಹಿತೆಯೊಂದಿಗೆ ದಾಂಡೇಲಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಬಿಡಿಸಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ಹಣ ಪಡೆದು ವಾಹನ ಬಿಡುಗಡೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದರ ಎರಡು ದಿನಗಳ ನಂತರ ಠಾಣೆಯ ದಾಖಲೆಯಲ್ಲಿದ್ದ ತನ್ನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಆರೋಪಿಗಳಲ್ಲಿ ಒಬ್ಬರು ವಾಟ್ಸ್ಆಪ್ ಮೂಲಕ ಸಂಪರ್ಕ ಸಾಧಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಜುಲೈ 6ರಂದು ರಾತ್ರಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ನಂತರ ದೂರವಾಣಿ ಕರೆ ಮಾಡಿ ಅಸಭ್ಯವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಅಂಕಣ ಬರಹ | ಎಸ್‌ಐಆರ್: `ರಾಜ್ಯ’ಕೀಯ ಚೆಸ್ ಆಡಿದ ಡಿಕೆ!
ಈ ಬಗ್ಗೆ ಆರಂಭದಲ್ಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿರುವ ಯುವತಿ, ನಂತರ ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಿ ದೂರು ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸ್ಆಪ್ ಸಂದೇಶಗಳು, ಕರೆ ವಿವರಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ. ಪೊಲೀಸ್ ಸಿಬ್ಬಂದಿಯ ವಿರುದ್ಧವೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.





















