SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು!

ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು!

0
7

ಕಾರವಾರ: ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಧಾವಂತದ ಘಟನೆ ನಡೆದಿದೆ.

ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ‘ಸ್ವಿಗ್ಗಿ’ (Swiggy) ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರವಾಸಕ್ಕೆ ಹೊರಟಿದ್ದಾಗ ಸಂಭವಿಸಿದ ದುರಂತ: ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ ಪ್ರವಾಸ (ಟೂರ್) ಹೊರಟಿದ್ದಾಗ ಈ ಘೋರ ದುರಂತ ಸಂಭವಿಸಿದೆ. ತೂಫಾನ್ ವಾಹನದಲ್ಲಿ (KA19AA5920) ಚಾಲಕ ಸೇರಿದಂತೆ ಒಟ್ಟು 9 ಜನರಿದ್ದರು. ಅರಬೈಲ್ ಘಾಟ್‌ನ ಬಳಗಾರ್ ತಲುಪುತ್ತಿದ್ದಂತೆ ತೂಫಾನ್ ವಾಹನ ಹಾಗೂ ಲಾರಿ (KA22AA1008) ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರ ವಿವರ: ​ಅಪಘಾತದಲ್ಲಿ ತೂಫಾನ್ ವಾಹನದಲ್ಲಿದ್ದ ಆರು ಜನರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ​ಬಸವರಾಜ್ (48), ​ಅಭಿಷೇಕ್ ಈಶ್ವರ್ (28), ​ಅಕ್ಷಯ (26), ​ಅಭಿಷೇಕ್ (26), ​ಸಂಜೀವ/ಸಂಜಯ ಅಂಗಡಿ (33 ವರ್ಷ – ವಾಹನ ಚಾಲಕ), ​ಮಂಜುನಾಥ ಚುಲಕಿ (32) ಎಂದು ಗುರುತಿಸಲಾಗಿದೆ.

ಮೂವರಿಗೆ ಗಂಭೀರ ಗಾಯ: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಿವರಾಜ್ ದುರ್ಗಪ್ಪ ಮಡಿವಾಳ್ (22 ವರ್ಷ), ​ಸಚಿನ್, ​ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28 ವರ್ಷ) ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

​ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯಕ್ಕೆ ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆದಿದೆ.