ದಾಂಡೇಲಿ: ಅಕ್ರಮ ಗೋವಾ ಮದ್ಯ ಸಾಗಾಟ ಪ್ರಕರಣದಲ್ಲಿ ಹಲವು ಬಾರಿ ಸಿಕ್ಕಿ ಹಾಕಿಕೊಂಡಿದ್ದ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸಸ್ಟೇಬಲ್ ಸಂತೋಷ್ ಲಮಾಣಿಯನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಆದೇಶ ಹೊರಡಿಸಿದ್ದಾರೆ.
ಸುಮಾರು ಎರಡು ವರ್ಷಗಳ ಹಿಂದೆ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ನಡೆಸುತ್ತಿದ್ದ ವೇಳೆ ಗೋಕರ್ಣದಲ್ಲಿ ಸಂತೋಷ್ ಲಮಾಣಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಬಂಧಿತರಾಗಿದ್ದರು. ಈ ಘಟನೆ ಬಳಿಕ ಅವರನ್ನು ಪೊಲೀಸ್ ಇಲಾಖೆಯಿಂದ ಅಮಾನತುಗೊಳಿಸಲಾಗಿತ್ತು.
ಪ್ರಕರಣದ ಕುರಿತು ಇಲಾಖಾ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಪೇದೆಯ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಇಲಾಖಾ ಶಿಸ್ತು ಕ್ರಮವಾಗಿ ಅವರನ್ನು ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದೆ.
ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಏನಾಗುತ್ತದೆ ಎಂಬ ಸಂದೇಶವನ್ನು ಈ ದಿಟ್ಟ ಕ್ರಮದ ಮೂಲಕ ನೀಡಿದೆ. ಪೊಲೀಸ್ ಇಲಾಖೆಯಲ್ಲಿದ್ದೂ, ಅಕ್ರಮ ಚಟುವಟಿಕೆ ಮಾಡುವ ಪೊಲೀಸರಿಗೆ ಇಲಾಖೆ ಎಚ್ಚರಿಕೆಯನ್ನು ನೀಡಿದಂತಾಗಿದೆ.





















