ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ದಿನವಿಡಿ ಭಾರಿ ಮಳೆಯಾಗಿದೆ. ಯಲ್ಲಾಪುರ ತಾಲೂಕಿನ ತಳಕೇಬೈನಿಂದ ಕಳಚೆಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ವಿಷಯ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಹಾದಿ ಮಾಡಿಕೊಡಲಾಗಿದ್ದು, ರಸ್ತೆಯಲ್ಲಿ ಬಿದ್ದಿರುವ ಇನ್ನುಳಿದ ಮಣ್ಣನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ.
ಜಿಲ್ಲೆಯ ಹಲೆವಡೆ ಹಳ್ಳಗಳು ತುಂಬಿಕೊಂಡು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವು ಭಾಗಗಳಲ್ಲಿ 60 ಮಿ.ಮೀ.ಗಿಂತಲೂ ಅಧಿಕ ಮಳೆ ದಾಖಲಾಗಿದೆ. ಯಲ್ಲಾಪುರ ತಾಲೂಕಿನ ಮಾವಿನಮನೆ ಮಳೆ ಮಾಪನ ಕೇಂದ್ರದಲ್ಲಿ ಜಿಲ್ಲೆಯಲ್ಲೇ ಅತ್ಯಧಿಕ 130.5 ಮಿ.ಮೀ. ಮಳೆ ದಾಖಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಾಂಡೇಲಿ ತಾಲೂಕಿನಲ್ಲೂ ಶಾಲೆಗಳಿಗೆ ರಜೆ ನೀಡಲಾಗಿತ್ತು.





















