ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ಗುರುವಾರ (ಜುಲೈ 2) ಬೆಳಗ್ಗಿನಿಂದಲೇ ಕಾರವಾರ ತಾಲೂಕಿನಾದ್ಯಂತ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ತುರ್ತು ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿಗಳ ಪ್ರದತ್ತವಾದ ಅಧಿಕಾರದ ಮೇರೆಗೆ ಕಾರವಾರ ತಹಶೀಲ್ದಾರರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಪುಟ್ಟ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿರುವ ಕಾರಣ ರಸ್ತೆಗಳಲ್ಲಿ ನೀರು ನಿಲ್ಲುವಿಕೆ, ಮರಗಳು ಉರುಳುವ ಅಪಾಯ ಹಾಗೂ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯನ್ನು ಪರಿಗಣಿಸಿ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಇಂದು ಘೋಷಿಸಲಾದ ರಜೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ಹಿನ್ನಡೆಯಾಗದಂತೆ ನೋಡಿಕೊಳ್ಳಲು, ಮುಂದಿನ ದಿನಗಳಲ್ಲಿ ಹೆಚ್ಚುವರಿ ಶಾಲಾ ದಿನಗಳನ್ನು ನಡೆಸುವ ಮೂಲಕ ಕಲಿಕಾ ದಿನಗಳನ್ನು ಸರಿದೂಗಿಸಿಕೊಳ್ಳುವಂತೆ ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸೂಚನೆ ನೀಡಿದ್ದಾರೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹವಾಮಾನ ಪರಿಸ್ಥಿತಿಯನ್ನು ಆಧರಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.





















