ಸಂ.ಕ.ಸಮಾಚಾರ ದಾಂಡೇಲಿ (ಉತ್ತರ ಕನ್ನಡ) : ಕಿನ್ನರ ಗ್ರಾಮಸ್ಥರಿಗೆ ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿ ಎಂದು ಸಣ್ಣ ನೀರಾವರಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ಅವರು ಶನಿವಾರ ಕಾರವಾರ ತಾಲೂಕು ಕಿನ್ನರ ಗ್ರಾಮ ಪಂಚಾಯತ್ ನಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.
ಕಿನ್ನರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿರುವ ಮತ್ತು ಬಾವಿ ಗಳಲ್ಲಿ ಉಪ್ಪು ನೀರು ಸೇರ್ಪಡೆಯಾಗುತ್ತಿರುವ ಕುರಿತ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಲ್ಲಿಸಿದ ಮನವಿಯ ಕುರಿತು ಮಾತನಾಡಿದ ಜಿಲ್ಲಾಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯಿಂದ ಈ ಭಾಗದಲ್ಲಿ ಉಪ್ಪುನೀರಿನ ಸಮಸ್ಯೆ ತಡೆಗೆ ಖಾರ್ ಲ್ಯಾಂಡ್ ನಿರ್ಮಾಣ ಮಾಡುವ ಕುರಿತಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಕುರಿತಂತೆ ಪರಿಶೀಲಿಸಿ ಆದಷ್ಟು ಶೀಘ್ರದಲ್ಲಿ ಈ ಸಮಸ್ಯಗೆ ಪರಿಹಾರ ಒದಗಿಸಲಾಗುವುದು ಎಂದರು.
ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಶಶಿ ಮಾತನಾಡಿ, ಈ ಭಾಗದಲ್ಲಿ ನೀರಿನ ಸಮಸ್ಯೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆವತಿಯಿಂದ ಕೈಗೊಂಡಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಶಾಶ್ವತ ಪರಿಹಾರ ಒದಗಿಸಲಾಗುವುದು, ಈ ಯೋಜನೆಯು ಮಾರ್ಚ್ ಅಂತ್ಯದೊಳಗೆ ಪೂರ್ಣ ಮಾಡಿ ಎಂದರು.
ಈ ಭಾಗದಲ್ಲಿ ಕಾಳಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ದೂರಿನ ಕುರಿತಂತೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಮೂಲಕ ಇಲ್ಲಿ ಚೆಕ್ ಪೋಸ್ಟ್ ಆರಂಭಿಸಿ ಈ ಅಕ್ರಮವನ್ನು ತಡೆಯುವುದಾಗಿ ತಿಳಿಸಿದರು. ಹೆಸ್ಕಾಂ ಇಲಾಖೆವತಿಯಿಂದ ವಿದ್ಯುತ್ ಲೈನ್‌ಗಳ ದುರಸ್ತಿ, ವಿದ್ಯುತ್ ಕಂಬಗಳ ಸ್ಥಳಾಂತರ ಮತ್ತು ಅರಣ್ಯ ಇಲಾಖೆಯಿಂದ ಅಪಾಯಕಾರಿ ಮರಗಳ ತೆರವು ಕುರಿತು ಸಲ್ಲಿಕೆಯಾಗಿರುವ ದೂರುಗಳನ್ನು, ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ನಿಯಂತ್ರಣ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು 40 ಕ್ಕೂ ಅಧಿಕ ದೂರುಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ದೂರುಗಳಿಗೆ ನಿಗಧಿತ ಅವಧಿಯೊಳಗೆ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಕಾರವಾರ ಉಪ ವಿಭಾಗಾಧಿಕಾರಿ ರಮ್ಯಾ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಏನಗೌಡರ, ಡಿವೈಎಸ್ಪಿ ಗಿರೀಶ್ ಹಾಗೂ ಎಲ್ಲಾ ಇಲಾಖಾಧಿಕಾರಿಗಳು ಇದ್ದರು.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















