Home ನಮ್ಮ ಜಿಲ್ಲೆ ಉತ್ತರ ಕನ್ನಡ ರಾಜ್ಯ ಸರ್ಕಾರ ಹಾಗೂ ರಮಾನಾಥ ರೈ ವಿರುದ್ಧ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಾಗ್ದಾಳಿ

ರಾಜ್ಯ ಸರ್ಕಾರ ಹಾಗೂ ರಮಾನಾಥ ರೈ ವಿರುದ್ಧ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಾಗ್ದಾಳಿ

0
17

ಕಾರವಾರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಸಚಿವ ರಮಾನಾಥ ರೈ ಅವರ ವಿರುದ್ಧ ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಗವಾಧ್ವಜ ಕಂಡರೆ ಕೆಲವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಇದೇ ಕಾರಣಕ್ಕೆ ಜಿಲ್ಲಾಧಿಕಾರಿಯವರಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪಟ್ಟಣದ ಹವ್ಯಕ ಭವನದಲ್ಲಿ ಶನಿವಾರ ಆಯೋಜಿಸಿದ್ದ ಬೃಹತ್ ‘ಜಿ ರಾಮ್ – ಜಿ ಜಾಗೃತಿ ಸಮಾವೇಶ’ದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿಯಲ್ಲಿ ನಡೆದ ಭಗವಾಧ್ವಜ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮಾನಾಥ ರೈ ನೀಡಿರುವ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: “ಲ್ಯಾಂಡ್ ಲಾರ್ಡ್” ದರ್ಶನಕ್ಕೆ ಸಿದ್ದರಾಮಯ್ಯ ಸಿದ್ದ

“ಸಿದ್ದರಾಮಯ್ಯ ಸರ್ಕಾರವೇ ನೇಮಿಸಿದ ಜಿಲ್ಲಾಧಿಕಾರಿ ಸಂಪ್ರದಾಯದಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಭಗವಾಧ್ವಜ ಹಸ್ತಾಂತರಿಸಿದ್ದಾರೆ. ಆದರೆ ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಕೆಲವರಿಗೆ ಭಗವಾಧ್ವಜ ಕಂಡರೆ ಆಗುವುದಿಲ್ಲ. ಇದರಿಂದ ಜಿಲ್ಲಾಧಿಕಾರಿಗೆ ಅನಗತ್ಯ ಒತ್ತಡ ಮತ್ತು ಮಾನಸಿಕ ಹಿಂಸೆ ನೀಡಲಾಗುತ್ತಿದೆ” ಎಂದು ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

“ಇಂದು ಸರ್ಕಾರ ದೇವಸ್ಥಾನಗಳಲ್ಲಿ ಕೇಸರಿ ಧ್ವಜವನ್ನೂ ಮುಟ್ಟಬಾರದು ಎನ್ನುವ ಮಟ್ಟಕ್ಕೆ ಇಳಿದಿದೆ. ಕಾಂಗ್ರೆಸ್‌ನಲ್ಲಿರುವ ಹಿಂದೂ ಕಾರ್ಯಕರ್ತರು ಈ ಬೆಳವಣಿಗೆಯನ್ನು ಗಂಭೀರವಾಗಿ ಗಮನಿಸಬೇಕು. ರಮಾನಾಥ ರೈ ಅವರು ಕೇವಲ ಒಂದು ವರ್ಗದ ಓಲೈಕೆಗಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಅವರು ಕಿಡಿಕಾರಿದರು.

ಇದನ್ನೂ ಓದಿ: ಹುಬ್ಬಳ್ಳಿ: ಮನೆ ಹಂಚಿಕೆ ತಾರತಮ್ಯ ಖಂಡಿಸಿ ಪ್ರತಿಭಟನೆ

ರಾಜ್ಯಪಾಲರಿಗೆ ಅಡ್ಡಿಪಡಿಸಿದ ಘಟನೆಗೆ ತೀವ್ರ ಖಂಡನೆ: ವಿಧಾನಸಭೆ–ವಿಧಾನಪರಿಷತ್ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದ ಘಟನೆಯನ್ನು ಖಂಡಿಸಿದ ಸಂಸದರು, “ರಾಜ್ಯಪಾಲರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಸರ್ಕಾರ ನೀಡಿದ ಸುಳ್ಳು ಭಾಷಣವನ್ನು ಓದಲು ಅವರು ನಿರಾಕರಿಸಿದ್ದಾರೆ. ಇದು ಅವರ ಹಕ್ಕು. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಭಾಷಣ ಓದದಿದ್ದಾಗ ನಾವು ಅವರಿಗೆ ಗೌರವ ನೀಡಿದ್ದೆವು” ಎಂದು ಹೇಳಿದರು.

“ಆದರೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಂತಹವರು ರಾಜ್ಯಪಾಲರನ್ನು ಅಡ್ಡಗಟ್ಟಿರುವುದು ಸಂಸದೀಯ ಮೌಲ್ಯಗಳಿಗೆ ಧಕ್ಕೆ ತರುವ ಕೆಲಸವಾಗಿದೆ. ಇದು ಪ್ರಜಾಪ್ರಭುತ್ವದ ಮೇಲೆ ನಡೆಸಿದ ದಾಳಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:  ಕಾರ್ ದಹನ ಪ್ರಕರಣ: ಅಪಘಾತವಲ್ಲ, ಪೂರ್ವನಿಯೋಜಿತ ಕೊಲೆ

ಈ ಸಮಾವೇಶವು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕ ಸುನೀಲ್ ನಾಯ್ಕ್ ಸೇರಿದಂತೆ ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.