ದಾಂಡೇಲಿ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸರು ಪಡುವ ಶ್ರಮ ಶ್ಲಾಘನೀಯವಾದದ್ದು, ಸಮಾಜವನ್ನು ಕಾಯುವ ಕೆಲಸದೊಂದಿಗೆ ಕಾನೂನು ಸುವ್ಯವಸ್ಥೆಯ ಮಹತ್ವದ ಜವಾಬ್ದಾರಿ ಅವರ ಹೆಗಲ ಮೇಲಿದೆ. ಅದನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ನಮ್ಮ ಪೊಲೀಸರಿಗೆ ವಸತಿ, ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಜೋಯಡಾದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ಇವರ ಸಹಯೋಗದೊಂದಿಗೆ 3 ಕೋಟಿ 71 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 12 ಪೊಲೀಸ್ ವಸತಿ ಗೃಹದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಜೋಯಡಾದಲ್ಲಿ ಪೊಲೀಸರ ವಾಸ್ತವ್ಯಕ್ಕೆ ವಸತಿ ಗೃಹಗಳ ಕೊರತೆ ಇತ್ತು. ಈ ಕೊರತೆಯನ್ನು ನೀಗಿಸಲು ಸರ್ಕಾರ ಅನುದಾನ ಬಿಡುಗಡೆ ಮಾಡಿ ಪೊಲೀಸರ ವಸತಿ ಗೃಹ ನಿರ್ಮಿಸಲು ಭೂಮಿ ಪೂಜೆ ಮಾಡಿ ಕಾರ್ಯಾರಂಭ ಮಾಡಿದ್ದಕ್ಕಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್‌ಪಿ ಶಿವಾನಂದ ಮದರಖಂಡಿ, ಸಿಪಿಐ ಚಂದ್ರಶೇಖರ ಹರಿಹರ, ಪಿಎಸ್‌ಐ ಮಹೇಶ ಮಾಳಿ, ಕೆಪಿಸಿಸಿ ಸದಸ್ಯ ಸದಾನಂದ ದಬಗಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಗಾವಡಾ, ಮಾಜಿ ಜಿಪಂ ಸದಸ್ಯ ರಮೇಶ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.









