ಉತ್ತರ ಕನ್ನಡ: ಜಿಲ್ಲೆಯ ಕಾಡಂಚಿನ ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಬುಡಕಟ್ಟು ಜನಾಂಗದವರಿಗೆ ನಿಗದಿತ ವೇಳೆಯಲ್ಲಿ ಪೌಷ್ಟಿಕ ಆಹಾರ ವಿತರಣೆ ಆಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯ ಡಿ. ಸ್ಯಾಮಸನ್ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ, ಸಿದ್ದಿ ಬುಡಕಟ್ಟು ಜನಾಂಗದವರಿಗೆ ಸರ್ಕಾರದಿಂದ ಒದಗಿಸಲಾಗುವ ಪೌಷ್ಟಿಕ ಆಹಾರ ನಿಗದಿತ ವೇಳೆಗೆ ತಲುಪುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಈ ಸಮುದಾಯದ ಬಹುತೇಕ ಕುಟುಂಬಗಳಿಗೆ ಉದ್ಯೋಗ ಮತ್ತು ಆದಾಯದ ಅವಕಾಶಗಳು ಕಡಿಮೆಯಾಗುವುದರಿಂದ ಆಹಾರ ಭದ್ರತೆಯ ಸಮಸ್ಯೆ ಎದುರಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದರಿಂದ ಮಕ್ಕಳ, ವೃದ್ಧರ ಹಾಗೂ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಪೌಷ್ಟಿಕಾಂಶದ ಕೊರತೆಯಿಂದ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಸಂಬಂಧಪಟ್ಟ ಇಲಾಖೆ ವಿವಿಧ ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವುದರಿಂದ ಫಲಾನುಭವಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಇಂತಹ ವಿಳಂಬಕ್ಕೆ ಕಡಿವಾಣ ಹಾಕಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ನಿಗದಿತ ವೇಳೆಯಲ್ಲೇ ಪೌಷ್ಟಿಕ ಆಹಾರ ತಲುಪುವಂತೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಸಿದ್ದಿ ಬುಡಕಟ್ಟು ಜನಾಂಗದ ಜನರ ಆರೋಗ್ಯ ಮತ್ತು ಪೌಷ್ಟಿಕ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಡಿ. ಸ್ಯಾಮಸನ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.






















