ದಾಂಡೇಲಿ: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳು ಮತ್ತು ಎಲ್ಲಾ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಿ ನಿಗಧಿತ ಅವಧಿಯೊಳಗೆ ವರದಿ ಸಲ್ಲಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳ ಅನುಷ್ಠಾನದ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವೈದ್ಯಕೀಯ ಕಾಲೇಜು ಸೇರಿದಂತೆ , ಸಾರ್ವಜನಿಕ ಕ್ರೀಡಾಂಗಣಗಳು, ಬಸ್ ನಿಲ್ದಾಣಗಳು, ಬಸ್ ಡಿಪೋಗಳು, ರೈಲು ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿರುವ ಬೀದಿ ನಾಯಿಗಳ ಸಂಖ್ಯೆಯನ್ನು ನಿಗಧಿತ ಕಾಲಾವಧಿಯಲ್ಲಿ ಗುರುತಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಗುರುತಿಸಲಾಗುವ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ನಿಗಧಿತ ಸ್ಥಳದಲ್ಲಿ ಬೇಲಿ ಹಾಕಿ ಅಥವಾ ಕೇಜ್ ಗಳಲ್ಲಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವ ಕುರಿತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಆದ್ಯತೆಯಲ್ಲಿ ಕ್ರಮ ಕೈಗೊಳ್ಳಬೇಕು, ಈ ಕಾರ್ಯದಲ್ಲಿ ಸಮೀಪದ ಗ್ರಾಮ ಪಂಚಾಯತ್‌ಗಳ ಸಹಕಾರವನ್ನು ಪಡೆಯುವಂತೆ ತಿಳಿಸಿದ ಅವರು, ಈ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಕೂಡಾ ನಡೆಸುವಂತೆ ತಿಳಿಸಿದರು.
ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಈ ಸ್ಥಳಗಳಲ್ಲಿ ಆಹಾರ ಪದಾರ್ಥಗಳನ್ನು ಚೆಲ್ಲುವುದು ಮತ್ತು ತ್ಯಾಜ್ಯ ನಿರ್ಮಾಣವ ಸಂಬಂಧಿತ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಮತ್ತು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಬೀದಿ ನಾಯಿಗಳನ್ನು ನಿಯಂತ್ರಿಸುವಂತೆ ರಾಷ್ಟ್ರೀಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೀದಿ ನಾಯಿಗಳ ನಿಯಂತ್ರಣ ವಿಧಾನಗಳು ಮತ್ತು ನಾಯಿ ಕಡಿತದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆಯ ಕುರಿತಂತೆ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಅಯೋಜಿಸುವಂತೆ ಮತ್ತು ಜಿಲ್ಲೆಯಲ್ಲಿ ರೇಬಿಸ್ ಚುಚ್ಚುಮದ್ದುಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬೀದಿ ನಾಯಿಗಳ ನಿಯಂತ್ರಣ ಕುರಿತಂತೆ ರಾಜ್ಯದಿಂದ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿರುವುದರಿಂದ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ನಿಗಧಿತ ಅವಧಿಯೊಳಗೆ ಈ ಎಲ್ಲಾ ಕಾರ್ಯಗಳನ್ನು ಕಾರ್ಯನಿರ್ವಹಿಸುವಂತೆ ಹಾಗೂ ಈ ಕುರಿತಂತೆ ಅಗತ್ಯ ದಾಖಲೆಗಳೊಂದಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಮೋಹನ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
