ಹೊಸಪೇಟೆ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ವಿದ್ಯುತ್ ಟ್ರಾನ್ಸ್ಫಾರ್ಮರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಹಬ್ಬದ ಹಿನ್ನೆಲೆಯಲ್ಲಿ ವಿದ್ಯುತ್ ಬಳಕೆ ಹೆಚ್ಚಾಗಿರುವ ಸಂದರ್ಭದಲ್ಲೇ ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದಲ್ಲಿ ಬೆಂಕಿಯ ಜ್ವಾಲೆ ಹಾಗೂ ದಟ್ಟ ಹೊಗೆ ಹೊರಬಂದಿದೆ. ಇದರಿಂದ ಸುತ್ತಮುತ್ತಲಿನ ಅಂಗಡಿಕಾರರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.
ಟ್ರಾನ್ಸ್ಫಾರ್ಮರ್ನಲ್ಲಿ ಅಧಿಕ ವಿದ್ಯುತ್ ಭಾರ (ಓವರ್ಲೋಡ್) ಅಥವಾ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆಯಿಂದಾಗಿ ಅಕ್ಕಪಕ್ಕದ ಅಂಗಡಿಗಳು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿಯಾಗುವ ಭೀತಿ ಎದುರಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.






















