ವಿಜಯನಗರ: ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಸಮೀಪ ಈ ದುರ್ಘಟನೆ ನಡೆದಿದೆ. ಟ್ರಾಕ್ಟರ್‌ಗೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ, ನಿಯಂತ್ರಣ ತಪ್ಪಿದ ಟ್ರಾಕ್ಟರ್ ಹಾಗೂ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿವೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಪೊಲೀಸರು ಹಾಗೂ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆಪಿ ಮುರುಳಿಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






















