ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2023-24ನೇ ಸಾಲಿನ 13ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಸೆಪ್ಟೆಂಬರ್ 4ರಂದು ನಡೆಯಲಿದೆ ಎಂದು ಕುಲಪತಿ ಪ್ರೊ.ಎಂ.ಮುನಿರಾಜು ಹೇಳಿದರು.
ನಗರದ ಹೊರವಲಯದ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಪರೀಕ್ಷಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ಘಟಿಕೋತ್ಸವ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.
ಘಟಿಕೋತ್ಸವದಲ್ಲಿ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ನವದೆಹಲಿಯ ಇಂಟರ್ ಯುನಿವರ್ಸಿಟಿ ಎಕ್ಸಲರೇಟರ್‌ನ ನಿರ್ದೇಶಕರಾದ ಪ್ರೊ.ಅವಿನಾಶ್ ಚಂದ್ರ ಪಾಂಡೆ ಮಾಡಲಿದ್ದಾರೆ.
ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮ-ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ವಾರ್ಷಿಕ ಘಟಿಕೋತ್ಸವದ ನೇತೃತ್ವವನ್ನು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರುಗಳು, ಕುಲಸಚಿವ ನಾಗರಾಜು.ಸಿ ಹಾಗೂ ಕುಲಸಚಿವ (ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ ಉಪಸ್ಥಿತರಿರುವರು.
3 ಜನರಿಗೆ ಗೌರವ ಡಾಕ್ಟರೇಟ್: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಇರ್ಫಾನ್ ರಜಾಕ್, ಡಾ.ವಸುಂಧರಾ ಭೂಪತಿ, ಬಾವಿಹಳ್ಳಿ ನಾಗನಗೌಡ ಸೇರಿ ಮೂರು ಮಹನೀಯರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ಕುಲಪತಿ ಪ್ರೊ.ಎಂ.ಮುನಿರಾಜು ಹೇಳಿದರು.
ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 51 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 59 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ.
ಎಲ್ಲಾ ವಿಭಾಗಗಳ ಸ್ನಾತಕ ಪದವಿಯ 80 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 75 ವಿದ್ಯಾರ್ಥಿಗಳು ಸೇರಿ ಒಟ್ಟು 155 ವಿದ್ಯಾರ್ಥಿಗಳು ರ‍್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ.
ಇರ್ಫಾನ್ ರಜಾಕ್ ಪರಿಚಯ: ಇರ್ಫಾನ್ ರಜಾಕ್ ಮೂಲತಃ ಬೆಂಗಳೂರಿನವರು. ಪ್ರತಿಷ್ಠಿತ ಪ್ರೆಸ್ಟೀಜ್ ಗ್ರೂಪ್‌ನ ಗೌರವಾಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು. ತಮ್ಮ ಉದ್ಯಮಶೀಲತೆ ಹಾಗೂ ಸಮಾಜಮುಖಿ ಸೇವೆಗಾಗಿ ಖ್ಯಾತಿ ಪಡೆದಿದ್ದಾರೆ. ನಾಲ್ಕು ದಶಕಗಳ ವಾಣಿಜ್ಯ, ವ್ಯಾಪಾರ ಹಾಗೂ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಹೂಡಿಕೆ ನಡೆಸಿ ನಾಡಿನ ಖ್ಯಾತ ಉದ್ಯಮಿಗಳಾಗಿ ಮುನ್ನಡೆದಿದ್ದಾರೆ.
ಡಾ.ವಸಂಧರಾ ಭೂಪತಿ ಪರಿಚಯ: ಡಾ.ವಸಂಧರಾ ಭೂಪತಿ ರಾಯಚೂರಿನಲ್ಲಿ ಜನಿಸಿದವರು. ತಮ್ಮ ವಿಶಿಷ್ಟ ವೈದ್ಯಕೀಯ ಸೇವೆ, ಸಾಹಿತ್ಯ, ಸಮಾಜಸೇವೆ ಮತ್ತು ಪತ್ರಿಕಾ ಅಂಕಣಕಾರರಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರ, ವೈದ್ಯಕೀಯ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಪಾರ ಸಾಧನೆಗೈದಿದ್ದಾರೆ. ಆರೋಗ್ಯ ಸಂಗತಿ, ಮನೆಯಂಗಳದಲ್ಲಿ ಔಷಧಿವನ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. 65ಕ್ಕೂ ಹೆಚ್ಚು ಆರೋಗ್ಯ ಕೃತಿಗಳು ಇಂಗ್ಲೀಷ್ ಮತ್ತು ಹಿಂದಿ ಭಾಷೆಗೆ ಅನುವಾದಗೊಂಡಿವೆ. ಸಾರ್ವಜನಿಕ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ.
ಬಾವಿಹಳ್ಳಿ ನಾಗನಗೌಡ: ಗಣಿನಾಡಿನ ಪ್ರಸಿದ್ದ ಉದ್ಯಮಿಯಾಗಿರುವ ಇವರು, ಬಿಕೆಜಿ ಫೌಂಡೇಶನ್ ಮೂಲಕ ಶಿಕ್ಷಣ ಅಭಿವೃದ್ಧಿ, ಸಾಮಾಜಿಕ ಸೇವೆ ಮತ್ತು ಸಾಹಿತ್ಯ-ಸಾಂಸ್ಕೃತಿಕ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರಗಳ ಮೂಲಕ ಕ್ಷಯರೋಗಿಗಳ ಚಿಕಿತ್ಸೆಗೆ ಶ್ರಮಿಸಿದ್ದಾರೆ. ಸಮಾಜಮುಖಿ ಕೆಲಸಗಳ ಮೂಲಕ ಸಮುದಾಯಕ್ಕೆ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ, ಮೂಲಭೂತ ಸೌಕರ್ಯಗಳ ಕಲ್ಪಿಸಲು ಕೊಡುಗೆ ನೀಡಿದ್ದಾರೆ. ಇವರ ಕಾರ್ಯಗಳಿಗೆ ಕನ್ನಡ ಶ್ರೀ ಮತ್ತು ಸೇವಾರತ್ನ ಪ್ರಶಸ್ತಿಗಳು ಒಲಿದು ಬಂದಿವೆ.