ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಗ್ರಾಮದ ರೈಲ್ವೆ ಸೇತುವೆ ಬಳಿ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ಮೂಲದ ಮಲ್ಲಿಕಾರ್ಜುನ (46) ಮೃತಪಟ್ಟ ಲಾರಿ ಚಾಲಕ ಎಂದು ಗುರುತಿಸಲಾಗಿದೆ. ವಡ್ಡರಹಳ್ಳಿ ಗ್ರಾಮದ ರೈಲ್ವೆ ಸೇತುವೆ ಬಳಿ ಸಂಚರಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






















