SK Home Ad
Home ನಮ್ಮ ಜಿಲ್ಲೆ ವಿಜಯನಗರ ಕೌಟುಂಬಿಕ ಕಲಹ: ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಪತಿ

ಕೌಟುಂಬಿಕ ಕಲಹ: ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಪತಿ

0
306

ವಿಜಯನಗರದಲ್ಲಿ ಕೌಟುಂಬಿಕ ಕಲಹದ ದುರಂತ; ಪತ್ನಿಯ ಕತ್ತು ಕೊಯ್ದು ಹತ್ಯೆ, ಆರೋಪಿ ಪತಿ ಪೊಲೀಸರ ವಶಕ್ಕೆ

ವಿಜಯನಗರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಆಗಸರ ಓಣಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಮೃತ ಮಹಿಳೆಯನ್ನು ಪ್ರಭಾವತಿ (50) ಎಂದು ಗುರುತಿಸಲಾಗಿದ್ದು, ಪತಿ ರಾಮಮೂರ್ತಿ (55) ಹತ್ಯೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಉಂಟಾಗಿದ್ದ ಕಲಹವೇ ಈ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ

ಮಾಹಿತಿಯ ಪ್ರಕಾರ, ಮನೆಯಲ್ಲೇ ನಡೆದ ವಾಗ್ವಾದ ತೀವ್ರ ಸ್ವರೂಪ ಪಡೆದು, ಆಕ್ರೋಶಗೊಂಡ ರಾಮಮೂರ್ತಿ ಹರಿತವಾದ ಆಯುಧದಿಂದ ಪತ್ನಿಯು ಪೂಜೆ ಮಾಡುವ ಸಂದರ್ಭದಲ್ಲಿ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕಿ ಎಸ್. ಜಾಹ್ನವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ್ ಹಾಗೂ ಡಿಎಸ್ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಸ್ಥಳ ಮಹಜರು ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದರು.

ಇದನ್ನೂ ಓದಿ: ಬಾಗಲಕೋಟೆಯ BUDA ಕಚೇರಿಯಲ್ಲಿ ಲೋಕಾಯುಕ್ತ ದಾಳಿ

ಪತ್ನಿಯನ್ನು ಹತ್ಯೆಗೈದ ಬಳಿಕ ಆರೋಪಿ ರಾಮಮೂರ್ತಿ ಪೊಲೀಸರ ವಶಕ್ಕೆ ಬಂದಿದ್ದು, ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ನಿಖರ ಕಾರಣವೇನು, ದಂಪತಿ ನಡುವೆ ಯಾವ ವಿಚಾರಕ್ಕೆ ಕಲಹ ಉಂಟಾಗಿತ್ತು ಎಂಬ ಕುರಿತು ತನಿಖೆ ಮುಂದುವರಿದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ. ಈ ಸಂಬಂಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.