ಹೂವಿನಹಿಪ್ಪರಗಿ: ಸಂವಿಧಾನಿಕವಾಗಿ 2ಎ ಮೀಸಲಾತಿಯನ್ನು ನೀಡುವಂತೆ ಆಗ್ರಹಿಸಿ ಕಳೆದ ವರ್ಷ ಬೆಳಗಾವಿಯ ಸುವರ್ಣಸೌಧದ ಮುಂದೆ ಹೋರಾಟ ನಡೆಸುವ ಸಂದರ್ಭದಲ್ಲಿ ಲಿಂಗಾಯತ ಪಂಚಮಸಾಲಿ ಬಾಂಧವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ಇಂದಿಗೆ ಒಂದು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಡಿ. 10ರಂದು ಕಪ್ಪು ಬಟ್ಟೆ ಪ್ರದರ್ಶಿಸಿ ಮೌನ ಪ್ರತಿಭಟನೆ ನಡೆಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ಬಸವನ ಬಾಗೇವಾಡಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಗಾಂಧಿಭವನದಿಂದ ಸುವರ್ಣಸೌಧದ ವರೆಗೆ ಮೌನ ಪ್ರತಿಭಟನೆ ಮಾಡುವ ನಿರ್ಧಾರ ಮಾಡಿದ್ದೇವೆ. ಬಸವನ ಬಾಗೇವಾಡಿ, ವಿಜಯಪುರದ ಭಾಗದ ಪಂಚಮಸಾಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲಿಸಬೇಕು ಎಂದು ವಿನಂತಿಸಿದರು.
