ಬೆಂಗಳೂರು: ಬೆಂಗಳೂರು ನಗರದ ಕೆಂಗೇರಿ ಬಳಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ (81) ವಿಧಿವಶರಾಗಿದ್ದಾರೆ. ಕೆಲವು ದಿನಗಳ ಹಿಂದೆ ತಮ್ಮ ಹೇಳಿಕೆಗಳಿಂದಲೇ ಸ್ವಾಮೀಜಿ ಸುದ್ದಿ ಮಾಡಿದ್ದರು. ಈ ಹೇಳಿಕೆ ಪೊಲೀಸ್ ಠಾಣೆಯ ಮೆಟ್ಟಿಲನ್ನು ಏರಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ತಡರಾತ್ರಿ ವಿಧಿವಶರಾದರು. ಕೆಂಗೇರಿಯಲ್ಲಿ ಮಠವನ್ನು ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಕ ಕ್ಷೇತ್ರಕ್ಕೆ ಸ್ವಾಮೀಜಿ ಅಪಾರ ಕೊಡುಗೆಯನ್ನು ನೀಡಿದ್ದರು.
ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಕೆಲವು ದಿನಗಳ ಹಿಂದೆ ಶ್ರೀ ನಿಶ್ಚಲಾನಂದ ಸ್ವಾಮೀಜಿಯನ್ನು ಶ್ರೀ ಮಠದ ಪೀಠಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು, ಸಿದ್ದರಾಮಯ್ಯ ಕುರ್ಚಿ ಬಿಟ್ಟುಕೊಡಬೇಕು, ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಿಸಬೇಕು ಮುಂತಾದ ಹೇಳಿಕೆಗಳಿಂದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಸುದ್ದಿಯಲ್ಲಿದ್ದರು.
ಎಚ್.ಡಿ.ದೇವೇಗೌಡರ ಸಂತಾಪ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಸಂಸ್ಥಾಪಕ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು’ ಎಂದು ಹೇಳಿದ್ದಾರೆ.
‘ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಮಾರ್ಗದರ್ಶಕರಾಗಿ ಕೆಲಸ ಮಾಡಿದ ಗುರುಗಳಿಗೆ, ಭಗವಂತನು ಸದ್ಗತಿ ಪ್ರಾಪ್ತಿಸಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಆಪಾರ ಸಂಖ್ಯೆಯ ಭಕ್ತರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ವಿವಾದಾತ್ಮಕ ಹೇಳಿಕೆ: ಕರ್ನಾಟಕದಲ್ಲಿ ರೈತರ ಜಮೀನು, ದೇವಾಲಯಗಳ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸುತ್ತಿರುವ ವಿಚಾರ ಕೆಲವು ತಿಂಗಳ ಹಿಂದೆ ಭಾರೀ ಚರ್ಚೆಗೆ ಕಾರಣವಾಗಿತ್ತು.
ಆಗ ಬೆಂಗಳೂರಿನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಗಳು “ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ” ಎಂದು ಹೇಳಿದ್ದರು.
“ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು” ಎಂದು ಹೇಳಿಕೆ ಕೊಟ್ಟಿದ್ದರು.
ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ವಿಚಾರಣೆಗೆ ಬರುವಂತೆ ಸ್ವಾಮೀಜಿಗೆ ನೋಟಿಸ್ ನೀಡಿದ್ದರು. ಆದರೆ ಅನಾರೋಗ್ಯದ ಕಾರಣ ಸ್ವಾಮೀಜಿ ವಿಚಾರಣೆಗೆ ಹಾಜರಾಗಿರಲಿಲ್ಲ.
ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಸ್ವಾಮೀಜಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದರು. ‘ಮುಸ್ಲಿಮರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ತಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದು ಹೇಳಿದ್ದರು.
ಡಿಕೆಶಿ ಮುಖ್ಯಮಂತ್ರಿಯಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದ್ದ ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, “ಸಿದ್ದರಾಮಯ್ಯ ಮನಸ್ಸು ಮಾಡಿದರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ. ಸಿದ್ದರಾಮಯ್ಯ ಕುರ್ಚಿ ಬಿಟ್ಟುಕೊಡಬೇಕು” ಎಂದು ಹೇಳಿಕೆ ಕೊಟ್ಟಿದ್ದರು.
ಶನಿವಾರ ಮಧ್ಯಾಹ್ನ 3 ಗಂಟೆಗೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿಯೇ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. ಭಕ್ತರ ದರ್ಶನಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗಿದೆ. ಶ್ರೀ ನಿಶ್ಚಲಾನಂದ ಸ್ವಾಮೀಜಿ ಅಂತಿಮ ವಿಧಿವಿಧಾನಗಳನ್ನು ನಡೆಸಲಿದ್ದಾರೆ.