ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಗೆಳೆಯರ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಯಾದಗಿರಿ ಜಿಲ್ಲೆಯ ಕೆಂಬಾವಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದು, ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಘಟನೆ ನಡೆದ ವೇಳೆ ಇಬ್ಬರೂ ಕುಡಿತಮತ್ತಿನಲ್ಲಿ ಇದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ಜಾಗ್ರತೆ: ಫೋಟೋ, ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮ
ಮಾತಿನ ಚಕಮಕಿ ಹಂತ ಹಂತವಾಗಿ ತೀವ್ರ ಗಲಾಟೆಯಾಗಿ ತಿರುಗಿ, ಬಸನಗೌಡ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಬಸನಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು: ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯಾಗಿರುವ ಮತ್ತೊಬ್ಬ ಬಸನಗೌಡನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ತಿ. ನರಸೀಪುರ ಮೈಸೂರು ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ
ಇನ್ನು ಈ ಘಟನೆ ಸುರಪುರ ತಾಲೂಕಿನ ಕೆಂಬಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಸ್ನೇಹಿತರಾಗಿ ಕೆಲಸ ಮಾಡುತ್ತಿದ್ದ ಇಬ್ಬರ ಮಧ್ಯ ಈ ರೀತಿಯ ದುರಂತ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕುಡಿತದ ಅಮಲಿನಲ್ಲಿ ಉಂಟಾಗುವ ಗಲಾಟೆಗಳು ಹೇಗೆ ಗಂಭೀರ ಪರಿಣಾಮ ಉಂಟುಮಾಡುತ್ತವೆ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.