ಯಾದಗಿರಿ: ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಅತ್ಯಂತ ದೊಡ್ಡ ಶಕ್ತಿಯಾಗಿದ್ದು, ದೇಶದ ಕೆಲವು ರಾಜ್ಯಗಳಲ್ಲಿ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡಲಾಗುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ಈ ವಿಚಾರವಾಗಿ ನ್ಯಾಯಾಲಯಗಳಲ್ಲಿಯೂ ಪ್ರಶ್ನೆಗಳು ಎದ್ದಿವೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಬ್ಲಾಕ್ ಮತ್ತು ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ “ಕಾಂಗ್ರೆಸ್ ನಡೆ ಮತ ರಕ್ಷಣೆ ಕಡೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ವಿವರವಾಗಿ ಮಾಹಿತಿ ನೀಡಿದ ಅವರು, ವಿರೋಧ ಪಕ್ಷಗಳ ಹೇಳಿಕೆಗಳಿಗೆ ಕಿವಿಗೊಡಬಾರದು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ನಾವು ಯಾವುದೇ ಪಕ್ಷದ ಪರ ಅಥವಾ ವಿರುದ್ಧ ಮಾತನಾಡುವುದಿಲ್ಲ. ಆದರೆ ಬಡವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾತರು, ದಲಿತರು ಹಾಗೂ ಸಾಮಾನ್ಯ ನಾಗರಿಕರ ಮತದಾನದ ಹಕ್ಕಿಗೆ ಧಕ್ಕೆ ಆಗಬಾರದು. ಇಂದು ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನಾಳೆ ಕರ್ನಾಟಕದಲ್ಲಿಯೂ ಮರುಕಳಿಸಬಹುದು ಎಂಬ ಆತಂಕ ಜನರಲ್ಲಿ ಇದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಮ್ಮ ಹೋರಾಟ ಯಾವುದೇ ವ್ಯಕ್ತಿ ಅಥವಾ ಪಕ್ಷದ ವಿರುದ್ಧವಲ್ಲ. ಪ್ರತಿಯೊಬ್ಬ ಅರ್ಹ ಮತದಾರನ ಮತದಾನದ ಹಕ್ಕು ಉಳಿಸುವುದೇ ನಮ್ಮ ಉದ್ದೇಶ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಯಾರೂ ಕಸಿದುಕೊಳ್ಳಬಾರದು. ಯಾದಗಿರಿ ಕ್ಷೇತ್ರದ ಪ್ರತಿಯೊಬ್ಬ ಮತದಾರನ ಹಕ್ಕು ರಕ್ಷಿಸಲು ನಾನು ಸದಾ ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ಶಾಸಕ ತುನ್ನೂರ ಭರವಸೆ ನೀಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಜನರ ಆಶೀರ್ವಾದದಿಂದ ಯೋಜನೆಗಳು ಯಶಸ್ವಿಯಾಗಿ ಮುಂದುವರಿಯುತ್ತಿವೆ ಎಂದರು.
ಗುರುವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕೆಲ ಸದಸ್ಯರೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿರುವುದು ಕಾಂಗ್ರೆಸ್ ಪಕ್ಷದ ಮೇಲಿನ ವಿಶ್ವಾಸವನ್ನು ತೋರಿಸುತ್ತದೆ. ಇದು ರಾಜ್ಯ ಸರ್ಕಾರದ ಜನಪರ ಆಡಳಿತಕ್ಕೆ ದೊರೆತಿರುವ ಬೆಂಬಲದ ಪ್ರತೀಕವಾಗಿದೆ ಎಂದು ಅವರು ಹೇಳಿದರು.






















