ಬೆಂಗಳೂರು: ನಟ ಯಶ್ ಅಭಿನಯದ ಟಾಕ್ಸಿಕ್ ಚಲನಚಿತ್ರದ ಟೀಸರ್ ಕುರಿತು ಆಮ್ ಆದ್ಮಿ ಪಾರ್ಟಿ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.
ಟಾಕ್ಸಿಕ್ ಚಿತ್ರದ ಟೀಸರ್‌ನಲ್ಲಿ ಅಶ್ಲೀಲ ಹಾಗೂ ಪ್ರೌಢ ದೃಶ್ಯಗಳನ್ನು ಅಳವಡಿಸಲಾಗಿದೆ. ಇದು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಉಷಾ ಮೋಹನ್ ಅವರು ಆಯೋಗಕ್ಕೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಜನವರಿ 12ರಂದು ಈ ಅರ್ಜಿಯನ್ನು ಆಯೋಗವು ಸ್ವೀಕರಿಸಿದೆ.
ಸಾಂಸ್ಕೃತಿಕ ಹಿನ್ನೆಲೆ ಮತ್ತು ಆಕ್ಷೇಪ: ಯಾವುದೇ ವಯೋಮಿತಿ ಅಥವಾ ಮುನ್ನೆಚ್ಚರಿಕೆ ಸೂಚನೆಗಳಿಲ್ಲದೆ ಈ ಟೀಸರ್ ಅನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗಿದೆ. ಇಂತಹ ದೃಶ್ಯಗಳು ಮಹಿಳೆಯರ ಘನತೆಗೆ ಧಕ್ಕೆ ತರುವುದಲ್ಲದೆ, ಕನ್ನಡದ ಸಾಂಸ್ಕೃತಿಕ ವಾತಾವರಣಕ್ಕೆ ಮಾಡಿದ ಅಪಮಾನ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಕೈಕೊಟ್ಟ ಗೂಗಲ್ ಮ್ಯಾಪ್ ವಿದೇಶಿ ಮಹಿಳೆ ರಕ್ಷಿಸಿದ ಸಿಂಧು
ವಿವಾದಿತ ಈ ಟೀಸರ್ ಅನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಸಾಮಾಜಿಕ ಜಾಲತಾಣಗಳಿಂದ ತೆರವುಗೊಳಿಸಬೇಕು. ಅಲ್ಲದೆ, ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಆಯೋಗಕ್ಕೆ ಮನವಿ ಮಾಡಲಾಗಿದೆ.
ಈ ದೂರಿನ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿಗಳು, ಅರ್ಜಿಯಲ್ಲಿನ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ ಶೀಘ್ರವಾಗಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.









