ಮಂಗಳೂರು: ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ. ಮೃತರನ್ನು ಮುಹಮ್ಮದ್ ಎಂಬವರ ಪತ್ನಿ ಝರೀನಾ (೪೭) ಎಂದು ಗುರುತಿಸಲಾಗಿದೆ. ಅವರ ಪುತ್ರಿ ಸಫಾ(೨೦) ಅವರನ್ನು ರಕ್ಷಿಸಲಾಗಿದೆ.
ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶುಕ್ರವಾರ ಬೆಳಗ್ಗೆ ೬ ಗಂಟೆ ಸುಮಾರಿಗೆ ಮುಹಮ್ಮದ್ ಅವರ ಮನೆಗೆ ಗುಡ್ಡ ಕುಸಿದು ಬಿದ್ದಿದೆ. ಈ ವೇಳೆ ಝರೀನಾ ಮತ್ತು ಸಫಾ ಕುಸಿದ ಮಣ್ಣಿನೊಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಣಾ ಕಾರ್ಯ ಕೈಗೊಂಡರೂ ಅಷ್ಟರಲ್ಲಿ ಝರೀನಾ ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಫಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬ್ಬಂದಿ ಸ್ಥಳದಲ್ಲಿ ತಹಶೀಲ್ದಾರ್ ಎಸ್.ಬಿ. ಕೂಡಲಗಿ ಇದ್ದರು
