Home ತಾಜಾ ಸುದ್ದಿ ಉಚಿತ ವಿದ್ಯುತ್: 12 ಲಕ್ಷ ನೋಂದಣಿ

ಉಚಿತ ವಿದ್ಯುತ್: 12 ಲಕ್ಷ ನೋಂದಣಿ

0

ಬೆಂಗಳೂರು: ೨೦೦ ಯೂನಿಟ್ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬೆಸ್ಕಾಂನಲ್ಲಿ ಇದುವರೆಗೆ ೧೨.೫೧ ಲಕ್ಷ ಗ್ರಾಹಕರು ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಗ್ರಾಹಕರು ಸೇವಾ ಸಿಂಧು ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಜೂನ್‌ 18 ರಂದು ಆರಂಭಗೊಂಡಿತ್ತು. ಮೊದಲ ದಿನ 96,305, ಎರಡನೆಯ ದಿನ 3,34,845, ಮೂರನೇ ದಿನ ರಾತ್ರಿ ವೇಳೆಗೆ 4,64,225 ಹಾಗೂ ನಾಲ್ಕನೇ ದಿನಿವಾದ ಇಂದು 1,89,945 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾತ್ರಿ ವೇಳೆಗೆ ಈ ಸಂಖ್ಯೆ ಇನ್ನಷ್ಟು ಹೆಚ್ಚಳಗೊಳ್ಳಲಿದೆ ಎಂದು ತಿಳಿಸಿದೆ. ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಸುಗಮವಾಗಿ ನಡೆದಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯೋಜನೆಯ ನೋಂದಣಿ ಪ್ರಕ್ರಿಯೆಯು ತುಂಬಾ ಸರಳವಾಗಿದೆ ಮತ್ತು ಗ್ರಾಹಕರು ಯಾವುದೇ ದಾಖಲೆಗಳನ್ನು ಒದಗಿಸುವ ಅಗತ್ಯವಿಲ್ಲ. ನೋಂದಣಿ ಮಾಡಲು ವಿದ್ಯುತ್ ಬಿಲ್‌ನಲ್ಲಿ ಖಾತೆ ಸಂಖ್ಯೆ, ಗ್ರಾಹಕರ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿದರೆ ಸಾಕು. ಗುರುವಾರದಿಂದ ರಾಜ್ಯದ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ನೋಂದಣಿ ಮಾಡಲು ಪ್ರತ್ಯೇಕ ಲಾಗಿನ್ ಐಡಿ ಹಾಗೂ ಪ್ರತ್ಯೇಕ ಲಿಂಕ್ ಅನ್ನು ನೀಡಲು ನಿರ್ಧರಿಸಲಾಗಿದೆ. ಹಾಗಾಗಿ ನಾಳೆಯಿಂದ ರಾಜ್ಯದ 2000 ವಿದ್ಯುಚ್ಛಕ್ತಿ ಕಚೇರಿಗಳಲ್ಲಿ ಗೃಹ ಜ್ಯೋತಿ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆಯಲಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ನಡೆಯುತ್ತಿದೆ. ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಮಾಡಲಾಗುತ್ತಿದೆ. ನೋಂದಣಿ ಪ್ರಕ್ರಿಯೆಗೆ ಯಾವುದೇ ಗಡುವು ಇಲ್ಲ. ಹಾಗಾಗಿ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version