ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಆಯನೂರು ಮಂಜುನಾಥ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಮುಂದಿನ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಎಲ್ಲರಿಗೂ ನಾನು ಹೇಳುವುದು ಇಷ್ಟೇ. ನೀವು ಕಾಂಗ್ರೆಸ್ ಪಕ್ಷದಲ್ಲಿ ಬೇರೂರಿದರೆ ನಿಮಗೆ ಸೂಕ್ತ ಸ್ಥಾನಮಾನಗಳು ಸಿಗಲಿವೆ. ನೀವು ಬಂದು ಹೋಗುವ ಪ್ರವೃತ್ತಿ ಮೈಗೂಡಿಸಿಕೊಂಡರೆ ನಿಮಗೆ ಸಿಗಬೇಕಾದ ಅವಕಾಶಗಳು ತಪ್ಪುತ್ತವೆ, ಅಷ್ಟೇ ಅಲ್ಲ ಜನ ನಿಮ್ಮ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ. ರಾಷ್ಟ್ರ ಧ್ವಜದ ಗುರುತು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಇತಿಹಾಸವಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ ಎಂದಿದ್ದಾರೆ.

