ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಹಣ ಪಡೆದ ಬಗ್ಗೆ ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ನಂತರ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ ಜಾಗೃತಿ ಮೂಡಿಸಿದ್ದಾರೆ, ಅವರ ಟ್ವೀಟ್ ಸಂದೇಶದಲ್ಲಿ “ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ. ಅರ್ಜಿ ಸಲ್ಲಿಕೆಗಾಗಿ ಯಾರಾದರೂ ಹಣ ನೀಡುವಂತೆ ಒತ್ತಾಯಿಸಿದಲ್ಲಿ ಅಥವಾ ಹಣ ಪಡೆದ ಬಗ್ಗೆ ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲು ಮಾಡಲಾಗುವುದು. ಮಧ್ಯವರ್ತಿಗಳ ಹಾವಳಿಯಿಲ್ಲದೆ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸಬೇಕು, ಸರ್ಕಾರದ ಯೋಜನೆಗಳ ಗರಿಷ್ಠ ಲಾಭ ಫಲಾನುಭವಿಗಳಿಗೆ ಸಿಗಬೇಕು ಎಂಬುದು ನಮ್ಮ ಆಶಯ.” ಎಂದಿದ್ದಾರೆ.