ಹುಬ್ಬಳ್ಳಿ: ರಾಜ್ಯದ ೨೧೬ ತಾಲ್ಲೂಕುಗಳಲ್ಲಿ ಬರವಿದ್ದರೂ ಇನ್ನೂ ಕೇಂದ್ರ ಸರ್ಕಾರದಿಂದ ನೆರವು ಸಿಕ್ಕಿಲ್ಲ; ಆದರೆ, ರಾಜ್ಯ ಸರ್ಕಾರ ರೈತರ ಹಿತ ಕಾಯುವುದರಲ್ಲಿ ಹಿಂದೆ ಸರಿದಿಲ್ಲ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆಯಂತೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರದಿAದ ಬರ ಅಧ್ಯಯನ ತಂಡ ಬಂದು ಪರಿಶೀಲನೆ ನಡೆಸಿ ತೆರಳಿದೆ. ಆದರೆ, ಈವರಗೆ ಅನುದಾನ ದೊರೆತಿಲ್ಲ. ಹಾಗಾಗಿ, ಇದೇ ೯ರಂದು ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ರೈತರ ನೆರವು ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.
ಧಾರವಾಡ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತಯೆಂದು ಘೋಷಣೆ ಮಾಡಿದೆ. ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿಯುವ ನೀರು, ಮೇವು ಪೂರೈಕೆಗೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಪ್ರತಿ ತಾಲೂಕಿನ ಪರಿಸ್ಥಿತಿ ಅವಲೋಕಿಸಿದ ಸಚಿವರು ತಹಸೀಲ್ದಾರರಿಗೆ ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರಲ್ಲದೇ, ನೀರಿನ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.
ಈ ವೇಳೆ ಶಾಸಕರಾದ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಧಾರವಾಡ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ಹಾಗೂ ಮತ್ತಿತರರಿದ್ದರು.