Home ತಾಜಾ ಸುದ್ದಿ ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ

ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ

0

ಬೆಳಗಾವಿ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಠಿಯಿಂದ ಮನೆಗಳ ಹಾನಿ, ಜಾನುವಾರು ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ, ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ. ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ. ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡುವುದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ ಎಂದು ಆರೋಪಿಸಿದರು.
ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ಪರಿಹಾರ ಕೊಡಬೇಕು, ಅದನ್ನು ಇದುವರೆಗೂ ನೀಡಿಲ್ಲ. ಬೆಳೆನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಆಗಿಲ್ಲ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ. ಸರ್ಕಾರ ಇದನ್ನು ಗಮನಿಸುತ್ತಿಲ್ಲ. ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಬರಪೀಡಿತ ಪ್ರದೇಶಗಳಿಗೆ ಬೇರೆ ಬೆಳೆ ಬೆಳೆಯಲು ಬೀಜ ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ
ಸರ್ಕಾರದವರು ಕೇವಲ ರಾಜಕಾರಣದಲ್ಲಿ ನಿರತರಾಗಿದ್ದಾರೆ. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಸಚಿವರು ಹಾಗೂ ಶಾಸಕರ ನಡುವೆ ಇರುವ ಸಮರ ಬಗೆಹರಿಸಲು ಮುಖ್ಯಮಂತ್ರಿಗಳು ಸಮಯ ಕಳೆಯುತ್ತಿದ್ದಾರೆ. ರಾಜ್ಯದ ಜನರು ಇಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ, ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಕೂಡಲೇ ಎಲ್ಲ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕು. ಸಾವು ನೋವಾದ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಆಗ್ರಹಿಸಿದರು.
ವರ್ಗಾವಣೆ ದಂಧೆ:
ಈ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ಎಲ್ಲರೂ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ, ಇದಕ್ಕಾಗಿ ಸರ್ಕಾರದಲ್ಲಿ ಪೈಪೋಟಿ ನಡೆಯುತ್ತಿದೆ. ಮೊನ್ನೆ ನಡೆದ ಸಭೆ ವರ್ಗಾವಣೆಯ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಅಷ್ಟೇ. ವರ್ಗಾವಣೆ ದಂಧೆಯಲ್ಲಿ ಬಾರ್ಗೆನಿಂಗ್ ನಡೆಯುತ್ತಿದೆ ಎಂದು ಬೊಮ್ಮಾಯಿ ಆರೋಪ ಮಾಡಿದರು.
ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿದೆ. ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರು ಸಭೆ ಮಾಡುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆದಷ್ಟು ಬೇಗ ಆಗಲಿದೆ ಎಂದರು.

Exit mobile version