ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇನ್ನು ನಾಲ್ಕು ದಿನಗಳಲ್ಲಿ ಕೈ ಸೇರಲಿದೆ. ನಂತರ ಸೂಕ್ತ ಅಭ್ಯರ್ಥಿಗಳ ಬಗ್ಗೆ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದರು.
ಗದಗನಲ್ಲಿ ನಡೆಯುವ ಕರ್ನಾಟಕ ಸಂಭ್ರಮ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಗುರುತಿಸಲು ಕೆಲಸ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಅವರು ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿನ ಆಕಾಂಕ್ಷಿಗಳ, ಸಮರ್ಥರ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದ್ದು, ನಾಲ್ಕು ದಿನದಲ್ಲಿ ಕೈ ಸೇರಲಿದೆ ಎಂದು ಹೇಳಿದರು.
ಬಿಜೆಪಿಯವರು ಬರ ಅಧ್ಯಯನ ಮಾಡಲಿ. ಆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿ ಎಂದು ಕುಟುಕಿದರು.
ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಲ್ಲಿದೆ? ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ ? ಅಸಮಾಧಾನ ಏನಿದ್ದರೂ ಬಿಜೆಪಿಯಲ್ಲಿಯೇ ಇರೋದು ಎಂದರು.
ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದು ಆರು ತಿಂಗಳಾಗುತ್ತಿದೆ. ಆದರೆ, ಬಿಜೆಪಿಯವರಿಗೆ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗಿಲ್ಲ. ಅಂದರೆ ಏನರ್ಥ? ಆ ಪಕ್ಷದಲ್ಲಿ ಅಸಮಾಧಾನ ಇರುವುದರಿಂದಲೇ ಆಗಿಲ್ಲ ಎಂದರು.