ಹುಬ್ಬಳ್ಳಿ: ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಸೇರಿರುವ ಗಡಿ ಭಾಗದ ೮೬೫ ಹಳ್ಳಿಗಳಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸುವುದಾಗಿ ಹೇಳಿರುವುದು ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ. ಕೂಡಲೇ ಆ ರಾಜ್ಯದ ಏಕನಾಥ ಶಿಂಧೆ ಸರ್ಕಾರವನ್ನು ಕೇಂದ್ರ ಸರ್ಕಾರ ಕಿತ್ತೊಗೆಯಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಇಲ್ಲಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡಿಗರ ಹಿತ ಕಾಪಾಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಉಳಿದಿಲ್ಲ' ಎಂದರು. ಕರ್ನಾಟಕದ ಗಡಿ ಹಳ್ಳಿಗಳಲ್ಲಿ
ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ’ ಜಾರಿಗೊಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಗರಂ ಆಗಿದ್ದರು.
`ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ರಾಜ್ಯ ಇನ್ನೊಂದರ ಸಾರ್ವಭೌಮತ್ವಕ್ಕೆ ಧಕ್ಕೆ ತರಬಾರದು. ಇದು ಸಾಮಾನ್ಯ ನಿಯಮ. ಇಲ್ಲವಾದರೆ ಒಕ್ಕೂಟ ವ್ಯವಸ್ಥೆಯ ಬಗ್ಗೆಯೇ ಜನಕ್ಕೆ ನಕಾರಾತ್ಮಕ ಭಾವನೆ ಮೂಡಲು ಕಾರಣವಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.