ಮಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಸಂಸದೀಯ ಮಂಡಳಿ ಕೆಲವೇ ದಿನಗಳಲ್ಲಿ ಘೋಷಿಸಲಿದೆ ಎಂದು ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಬದಲಾವಣೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಕೆಲವು ಹಾಲಿ ಶಾಸಕರನ್ನು ಕೈಬಿಡುವ ಬಗ್ಗೆ ಅಥವಾ ಅವರನ್ನೇ ಅಭ್ಯರ್ಥಿ ಆಗಿಸುವ ಕುರಿತು ಸಂಸದೀಯ ಮಂಡಳಿ ನಿರ್ಧರಿಸಲಿದೆ. ಈ ಹಿಂದಿನಿಂದಲೂ ನಮ್ಮ ನೀತಿ ಇದೆ, ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಈ ಬಾರಿಯೂ ಅದೇ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಒಳ ಮೀಸಲಾತಿ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅದಕ್ಕಾಗಿ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಖ್ಯಮಂತ್ರಿಗಳು ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ. ಎಲ್ಲರೂ ಸಮಾಧಾನದಿಂದ ಇದ್ದಾರೆ, ಯಾರೂ ನೋವಿನಲ್ಲಿ ಇಲ್ಲ. ಆದರೆ ಕಾಂಗ್ರೆಸ್ ಇದರಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದರು.