ಬೆಳಗಾವಿ : ಮಂಗಳೂರು ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಕಳೆದ 11 ವರ್ಷದ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಬುಧವಾರ ಶ್ರೀರಾಮ ಸೇನೆಯ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಮನವಿ ರವಾನಿಸಿದರು.
ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ರಾಜ್ಯ ಸರಕಾರ ಮೌನವಾಗಿದೆ. ಕೂಡಲೇ ಇದನ್ನು ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ತನಿಖಾಧಿಕಾರಿ, ವೈದ್ಯಾಧಿಕಾರಿಗಳು ಈ ಹಿಂದೆ ಲೋಪದೋಷಗಳನ್ನು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೂಡಲೇ ಅವರನ್ನು ಅಮಾನತ್ತು ಮಾಡಿ ತನಿಖೆಗೆ ಒಳಪಡಿಸಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಸೌಜನ್ಯ ಕುಟುಂಬಕ್ಕೆ ನಿರ್ದೋಶಿಯಾಗಿರುವ ಸಂತೋಷ ರಾವ್ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಕೊಡಬೇಕು. ಬೆಳ್ತಂಗಡಿಯಲ್ಲಿ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೌಜನ್ಯ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಗಂಗಾಧರ ಕುಲಯ, ರವಿ ಕೋಕಿತಕರ, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು
