ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಹೊರ ಗುತ್ತಿಗೆ ನೇಮಕಾತಿಗೆ ಮೀಸಲಾತಿ ನಿಗದಿಪಡಿಸಿ ಹೊರಡಿಸಿದ್ದ ಆದೇಶವನ್ನು ಈಗ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದೆ.
ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ ಗೆಜೆಟ್ ಅಧಿಸೂಚನೆಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿದೆ. ೨೦೨೩ರ ಆ.೨೧ ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ.