ವಿಶ್ರಾಂತಿ ಮೊರೆ ಹೋದ ಸಿದ್ದರಾಮಯ್ಯ: ಯಾವುದೇ ಸಭೆ, ಕಾರ್ಯಕ್ರಮವಿಲ್ಲ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸಂಪೂರ್ಣ ವಿಶ್ರಾಂತಿ ಮೊರೆ ಹೋಗಿದ್ದಾರೆ. ಮಂಗಳವಾರ ಅವರು ಯಾವುದೇ ಸಭೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಬೆಂಗಳೂರಿನಲ್ಲಿಯೇ ಇರುವ ಅವರು ಬುಧವಾರ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಸುತ್ತು ಬಂದ ಹಿನ್ನಲೆಯಲ್ಲಿ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದರು. ಎಂಆರ್‌ಐ ಸ್ಕ್ಯಾನ್‌ ಸಹ ಮಾಡಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದರು.

ಆರೋಗ್ಯ ತಪಾಸಣೆ ನಂತರ ಸಿದ್ದರಾಮಯ್ಯ ವಿಶ್ರಾಂತಿ ಮೊರೆ ಹೋಗಿದ್ದರು. ಮಂಗಳವಾರ ಸಹ ಅವರು ಯಾವುದೇ ಸಭೆ, ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿಲ್ಲ. ಸಂಪೂರ್ಣ ವಿಶ್ರಾಂತಿಯನ್ನು ಪಡೆದುಕೊಳ್ಳಲಿದ್ದಾರೆ.

ಬುಧವಾರ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೈಸೂರು ದಸರಾ ಸಂದರ್ಭದಲ್ಲಿ ಏರ್‌ಶೋ ಆಯೋಜನೆ ಮಾಡುವ ಕುರಿತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಜೊತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಗುರುವಾರ ಸಹ ಸಿದ್ದರಾಮಯ್ಯ ದೆಹಲಿಯಲ್ಲಿಯೇ ಇರಲಿದ್ದಾರೆ. ಅದರಲ್ಲೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಕಳೆದ ವಾರ ರಾಜ್ಯಕ್ಕೆ ಆಗಮಿಸಿ ಶಾಸಕರನ್ನು ಭೇಟಿ ಮಾಡಿದ ಬಳಿಕ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿರುವುದು ಕುೂತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಇಬ್ಬರೂ ಸಹ ದೆಹಲಿ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ. ಎತ್ತಿನಹೊಳೆ ಯೋಜನೆ ಕುರಿತು ವಿವಿಧ ಕೇಂದ್ರ ಸಚಿವರನ್ನು ಭೇಟಿಯಾಗಲಿ ಡಿ. ಕೆ. ಶಿವಕುಮಾರ್ ಸಹ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.

ರಣದೀಪ್ ಸುರ್ಜೇವಾಲ ರಾಜ್ಯ ಭೇಟಿಯ ವೇಳೆ 60ಕ್ಕೂ ಅಧಿಕ ಶಾಸಕರನ್ನು ಭೇಟಿ ಮಾಡಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಪಕ್ಷ ಸಂಘಟನೆ, ಸಚಿವರ ಕಾರ್ಯ ವೈಖರಿ ಕುರಿತು ಮಾಹಿತಿ ಸಂಗ್ರಹ ಮಾಡಿ ವರದಿಯನ್ನು ವರಿಷ್ಠರಿಗೆ ನೀಡಿದ್ದಾರೆ. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ದೆಹಲಿ ಭೇಟಿಯ ವೇಳೆ ಈ ಕುರಿತು ಚರ್ಚೆಗಳು ನಡೆಯುವ ನಿರೀಕ್ಷೆ ಇದೆ.

ಸೆಪ್ಟೆಂಬರ್‌ನಲ್ಲಿ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂಬ ಹೇಳಿಕೆ ಈಗಾಗಲೇ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅಧಿಕಾರ ಹಸ್ತಾಂತರದ ಬಗ್ಗೆ, ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಕುರಿತು ದೆಹಲಿಯಲ್ಲಿ ಚರ್ಚೆ ನಡೆಯಲಿದೆಯೇ? ಎಂಬ ಪ್ರಶ್ನೆ ಎದ್ದಿದೆ. ಅಧಿಕಾರ ಹಸ್ತಾಂತರದ ಕುರಿತು ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ಈಗಾಗಲೇ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ.