ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ, ಐಪಿಎಸ್ ಅಧಿಕಾರಿ ಬಿ.ದಯಾನಂದ ಅಮಾನತು ಆದೇಶವನ್ನು ವಾಪಸ್ ಪಡೆದಿದೆ. ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಅವರನ್ನು ಅಮಾನತು ಮಾಡಲಾಗಿತ್ತು.
ಸೋಮವಾರ ಅಮಾನತು ವಾಪಸ್ ಪಡೆಯುವ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಕೆ.ವಿ.ಅಶೋಕ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-4) ಆದೇಶವನ್ನು ಹೊರಡಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆ ಬಳಿಕ ಕರ್ನಾಟಕ ಸರ್ಕಾರ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಅಮಾನತು ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ ಆದೇಶಿಸಿತ್ತು.
ಎಲ್ಲಾ ಅಧಿಕಾರಿಗಳ ಅಮಾತನು ವಾಪಸ್: ಆದ್ದರಿಂದ ಪಶ್ಚಿಮ ವಿಭಾಗದ ಮಾಜಿ ಡಿವೈಎಸ್‌ಪಿ ಬಾಲಕೃಷ್ಣ, ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ ಬಿ.ದಯಾನಂದ ಮತ್ತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಗಿರೀಶ್ ಅಮಾನತು ಮುಂದುವರೆದಿತ್ತು. ಸೋಮವಾರ ಎಲ್ಲಾ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ.
ಕರ್ನಾಟಕ ಸರ್ಕಾರ ಬಿ.ದಯಾನಂದ ಅಮಾನತುಗೊಳಿಸಿದ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ನೇಮಕ ಮಾಡಿತ್ತು. 1996ನೇ ಬ್ಯಾಚ್ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಜೂನ್ 6ರಂದು ಅಧಿಕಾರವಹಿಸಿಕೊಂಡಿದ್ದರು.
ಬಿ.ದಯಾನಂದ 1994ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರೂ ಆಗಿದ್ದರು. ಆದರೆ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಮೃತಪಟ್ಟ ಹಿನ್ನಲೆಯಲ್ಲಿ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು.
ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ಈ ಕುರಿತು ವಿಚಾರಣೆ ನಡೆಸಲು ಆಯೋಗ ರಚನೆ ಮಾಡಿತ್ತು. ಈಗಾಗಲೇ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದು, ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಅನುಮೋದಿಸಲಾಗಿದೆ.
ಈ ಘಟನೆಗೆ ಕಾರಣ ಸರ್ಕಾರ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಸರ್ಕಾರ ತನ್ನ ತಪ್ಪು ಮುಚ್ಚಿ ಹಾಕಿಕೊಳ್ಳಲು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಈಗ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗದ ವರದಿಯನ್ನು ಅಂಗೀಕರಿಸಿದೆ. ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒಪ್ಪಿಗೆ ಕೊಟ್ಟಿದೆ.