Home ತಾಜಾ ಸುದ್ದಿ Prajwal Revanna: ಅತ್ಯಾಚಾರ ಪ್ರಕರಣ, ಪ್ರಜ್ವಲ್ ರೇವಣ್ಣ ದೋಷಿ

Prajwal Revanna: ಅತ್ಯಾಚಾರ ಪ್ರಕರಣ, ಪ್ರಜ್ವಲ್ ರೇವಣ್ಣ ದೋಷಿ

0

ಹಾಸನ; ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಒಂದು ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಶುಕ್ರವಾರ ಪ್ರಕಟವಾಗಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಹಾಲ್‌ನಲ್ಲಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದರು.

ಕೆ.ಆರ್.ನಗರದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಆರೋಪಿಯಾಗಿದ್ದರು. ಈ ಪ್ರಕರಣದ ವಿಚಾರಣೆ ಜುಲೈ 18ರಂದು ಪೂರ್ಣಗೊಂಡಿತ್ತು. ಹಾಸನದ ಸಂಸದರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 48 ವರ್ಷದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ನಡೆಸಿದ್ದಾರೆ ಎಂಬುದು ಆರೋಪವಾಗಿತ್ತು.

ಬೆಂಗಳೂರು ನಗರದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದ ತೀರ್ಪುನ್ನು ಶುಕ್ರವಾರ ಪ್ರಕಟಿಸಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸಲಿದೆ. 7 ತಿಂಗಳಿನಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಪ್ರಕಟಿಸಿದೆ.

ಪ್ರಜ್ವಲ್‌ ರೇವಣ್ಣ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶುಕ್ರವಾರ ಕೋರ್ಟ್ ತೀರ್ಪು ನೀಡುವಾಗ ಅವರು ಕೋರ್ಟ್‌ನಲ್ಲಿದ್ದರು. ಕೋರ್ಟ್ ದೋಷಿ ಎಂದು ತೀರ್ಪು ನೀಡುತ್ತಿದ್ದಂತೆಯೇ ಕಣ್ಣೀರು ಹಾಕಿದರು. ಕೋರ್ಟ್ ಆವರಣದಲ್ಲಿಯೂ ಅವರು ಕಣ್ಣೀರು ಹಾಕುತ್ತಿದ್ದು, ವಕೀಲರು ಸಂತೈಸಿದರು.

ಒಟ್ಟು 4 ಪ್ರಕರಣಗಳು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 4 ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಕೆ.ಆರ್.ನಗರದ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವುದು ಮೊದಲ ಪ್ರಕರಣವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪು, ಶಿಕ್ಷೆಯನ್ನು ರದ್ದು ಮಾಡುವಂತೆ ಹೈಕೋರ್ಟ್, ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲು ಸಹ ಅವಕಾಶವನ್ನು ನೀಡಿದೆ.

ಪ್ರಜ್ವಲ್ ರೇವಣ್ಣ ಹಾಸನದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸ, ಬೆಂಗಳೂರಿನ ಬಸವನಗುಡಿಯಲ್ಲಿರುವ ನಿವಾಸದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಳು. ಎಸ್ಐಟಿ ಈ ಪ್ರಕರಣದ ತನಿಖೆ ನಡೆಸಿ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.

2024ರ ಲೋಸಕಭೆ ಚುನಾವಣೆ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಾಗ ಕೆ.ಆರ್.ನಗರ ಮೂಲದ ಮಹಿಳೆಯನ್ನು ಅಪಹರಣ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಹ ಆರೋಪಿಯಾಗಿದ್ದಾರೆ.

ಪ್ರಜ್ವಲ್ ರೇವಣ್ಣ ನನ್ನ ಮೇಲೆ ಅತ್ಯಾಚಾರ ನಡೆಸಿ ಅದರ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಫೋಟೋಗಳನ್ನು ತೆಗೆದುಕೊಂಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಳು. ಲೋಕಸಭೆ ಚುನಾವಣೆಯ ಮತದಾನಕ್ಕೆ ಕೆಲವು ದಿನ ಮೊದಲು ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೋಗಳು ಬಹಿರಂಗವಾಗಿತ್ತು.

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ನಡೆಸಿದ ಫೋಟೋ, ವಿಡಿಯೋ ಬಹಿರಂಗ ಆದ ಬಳಿಕ ಬಂಧನ ಭೀತಿಯಿಂದ ಪ್ರಜ್ವಲ್ ರೇವಣ್ ವಿದೇಶಕ್ಕೆ ಪರಾರಿಯಾಗಿದ್ದರು. ಮೇ 30,2024ರಂದು ಅವರು ಬೆಂಗಳೂರು ನಗರಕ್ಕೆ ಆಗಮಿಸಿದ್ದರು. ಆಗ ಎಸ್‌ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಿದ್ದರು.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನೀಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್, ಕರ್ನಾಟಕ ಹೈಕೋರ್ಟ್, ಸುಪ್ರೀಂಕೋರ್ಟ್ ವಜಾಗೊಳಿಸಿವೆ.

NO COMMENTS

LEAVE A REPLY

Please enter your comment!
Please enter your name here

Exit mobile version