ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾಗಿರುವ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ (ಸಿಗಂದೂರು ಕೇಬಲ್ ಬ್ರಿಡ್ಜ್) ಉದ್ಘಾಟನೆ ಸೋಮವಾರ ನಡೆದಿದೆ. ಆದರೆ ಈ ಕಾರ್ಯಕ್ರಮದ ರಾಜಕೀಯ ಜಟಾಪಟಿ ಪ್ರಧಾನಿ ನರೇಂದ್ರ ಮೋದಿ ಕಛೇರಿ ತಲುಪಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಷ್ಟಾಚಾರ ಉಲ್ಲಂಘನೆ ಕುರಿತು ನರೇಂದ್ರ ಮೋದಿಗೆ ಪತ್ರವನ್ನು ಬರೆದಿದ್ದಾರೆ.
ಸಿಗಂದೂರು ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಮುಂತಾದವರು ಪಾಲ್ಗೊಂಡಿದ್ದರು. ಕಾಂಗ್ರೆಸ್ ನಾಯಕರು ಕಾರ್ಯಕ್ರಮದಿಂದ ದೂರ ಉಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರವೇ ತಾವು ವಿಜಯಪುರ ಪ್ರವಾಸದಲ್ಲಿದ್ದು ಸೇತುವೆ ಉದ್ಘಾಟನೆ ಕಾರ್ಯಕ್ರಮ ಮುಂದೂಡಿ ಎಂದು ಸಚಿವ ನಿತಿನ್ ಗಡ್ಕರಿಗೆ ಪತ್ರವನ್ನು ಬರೆದಿದ್ದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಾಗರಕ್ಕೆ ಆಗಮಿಸಿದ್ದರು. ಆದರೆ ಸಿದ್ದರಾಮಯ್ಯ ಸೂಚನೆಯಂತೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ.
ಕೇಂದ್ರ ಸರ್ಕಾರ ಶಿಷ್ಟಾಚಾರ ಪಾಲಿಸಿಲ್ಲ. ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸೇರಿ ಇತರ ನಾಯಕರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಭನಾರ್ಥವಾಗಿ ಕಾರ್ಯಕ್ರಮದಿಂದ ದೂರ ಉಳಿದರು.
ಮೋದಿಗೆ ಸಿದ್ದರಾಮಯ್ಯ ಪತ್ರ: ರಾಜ್ಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸೇರಿ ಸಚಿವರನ್ನು ಆಹ್ವಾನಿಸಿಲ್ಲ. ಕೇಂದ್ರ ಸರ್ಕಾರ ಶಿಷ್ಟಾಚಾರ ಪಾಲನೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಸರ್ಕಾರದ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಯೋಜಿಸಿದ್ದ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.
ಪತ್ರದಲ್ಲಿ ಸಿದ್ದರಾಮಯ್ಯ ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಉದ್ಘಾಟನೆಯೂ ಸೇರಿದಂತೆ ಹಲವು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಮಾತ್ರವಲ್ಲ, ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ವಿಷಯವನ್ನು ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಕೂಡ ಮುದ್ರಿಸಲಾಗಿತ್ತು. ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕುವುದರಿಂದ ಹಿಡಿದು ಆಹ್ವಾನ ನೀಡುವ ವರೆಗೆ ಎಲ್ಲಾ ಹಂತಗಳಲ್ಲಿಯೂ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷಕ್ಕೆ ಕಾರಣವಾಗಬಹುದಾದ ಈ ನಡೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಇದನ್ನು ರಾಜ್ಯ ಸರ್ಕಾರವು ಬಲವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳಾಗದಂತೆ ತಮ್ಮ ಎಲ್ಲಾ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುತ್ತೀರೆಂದು ನಾನು ಭಾವಿಸಿದ್ದೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಹೇಳಿದ್ದಾರೆ.