ನವದೆಹಲಿ: ʻಆಪರೇಷನ್ ಸಿಂದೂರʼ ಯಶಸ್ಸಿನ ಬೆನ್ನಲ್ಲೇ ಇಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿತು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಎಂಐಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.
ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ವಾಯುಸೇನೆ ನಡೆಸಿದ ದಾಳಿಯಲ್ಲಿ 100 ಉಗ್ರರ ಹತ್ಯೆಯಾಗಿದೆ. ಈ ಪರಿಸ್ಥಿತಿಯನ್ನು ಬೆಳೆಸಲು ನಾವು ಬಯಸುವುದಿಲ್ಲ. ಒಂದು ವೇಳೆ ಪಾಕಿಸ್ತಾನ ಮತ್ತೆ ಕಿತಾಪತಿ ಮಾಡಿದರೆ ಹಿಂದೆ ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು.
ಮೋದಿ ಗೈರು ಅಸಮಾಧಾನ:
ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಾಗಿದ್ದು, ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ಷೇಪವೆತ್ತಿದ್ದರು. ಆದರೆ ಈ ವಿಷಯವಾಗಿ ಇದೀಗ ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಲು ಇಚ್ಚಿಸುವುದಿಲ್ಲ. ನಾವು ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡುವುದನ್ನು ಮುಂದುವರಿಸುತ್ತೇವೆ ಎಂದು ಖರ್ಗೆ ತಿಳಿಸಿದ್ದಾರೆ.