ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯ `ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ’ ನೀಡಿದ್ದ ರಾಜ್ಯ ಬಂದ್‌ಗೆ ಕರೆಗೆ ಹುಬ್ಬಳ್ಳಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ನಗರದ ವಾಣಿಜ್ಯೋದ್ಯಮ ಸಂಸ್ಥೆಯ ಕಚೇರಿಯಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ಸಾಗಿ ತಹಸೀಲ್ದಾರ್ ಕಲಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಸಾವಿರಾರು ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು, ಪ್ರತಿಭಟನೆಯುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೊಟೇಲ್, ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಂಸ್ಥೆಗಳು ಬಂದ್ ಆಗಿದ್ದವು. ಗೋಕುಲ ರಸ್ತೆಯ ಕೈಗಾರಿಕ ಪ್ರದೇಶ ಸಂಪೂರ್ಣ ಸ್ಥಬ್ಧವಾಗಿತ್ತು. ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಊರು ಪರ ಊರಿನಿಂದ ಆಗಮಿಸಿದವರು ಊಟ, ತಿಂಡಿಗಾಗಿ ಪರದಾಡಿದರು. ಸಾರಿಗೆ ಸೇವೆ ಎಂದಿAತೆ ಇತ್ತು.
ಈ ವೇಳೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಅಗಡಿ ಸೇರಿದಂತೆ ನೂರಾರು ಉದ್ಯಮಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.