ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಹಲವು ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿದ್ದು, ಇಂದು ಹಿಂಸಾರೂಪ ಪಡೆದುಕೊಂಡಿದೆ. ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದಿದೆ.
ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಪ್ರತಿಭಟನಾಕಾರರ ಗುಂಪು ಚಪ್ಪಲಿ, ಕಲ್ಲು ಎಸೆದಿದ್ದಾರೆ. ಇದರಿಂದಾಗಿ ಪೊಲೀಸರು ಪ್ರತಿಭಟನಾ ನಿರತರನ್ನು ಚದುರಿಸಲು ಲಾಠಿ ಬೀಸಿದ್ದಾರೆ. ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದಾರೆ.